ಬಿಬಿಎಂಪಿಯ ಕನ್ನಡ ಘಟಕಗಳ ಅನುಷ್ಠಾನ ಸ್ವಾಗತಾರ್ಹ : ಡಾ.ಪುರುಷೋತ್ತಮ ಬಿಳಿಮಲೆ

ಡಾ.ಪುರುಷೋತ್ತಮ ಬಿಳಿಮಲೆ
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕನ್ನಡ ಅನುಷ್ಠಾನವನ್ನು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಬಿಬಿಎಂಪಿ ವಲಯವಾರು ಕನ್ನಡ ಅನುಷ್ಠಾನ ಘಟಕಗಳನ್ನು ಆರಂಭಿಸಿರುವುದು ಸ್ವಾಗತಾರ್ಹ ಕ್ರಮ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಿಸಿದ್ದಾರೆ.
ಮಂಗಳವಾರ ಈ ಕುರಿತಂತೆ ಪಾಲಿಕೆಯ ಮುಖ್ಯ ಆಯುಕ್ತರಿಗೆ ಪತ್ರ ಬರೆದಿರುವ ಅವರು, ಜನವರಿಯಲ್ಲಿ ಪಾಲಿಕೆಯ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಂದರ್ಭದಲ್ಲಿ ನೀಡಲಾದ ನಿರ್ದೇಶನದ ಅನುಸಾರ ಬಿಬಿಎಂಪಿ ಸಕ್ರಿಯವಾಗಿ ಸ್ಪಂದಿಸಿದ್ದು, ಕನ್ನಡದ ಹಿತದೃಷ್ಠಿಯಿಂದ ಈ ಘಟಕಗಳು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುವುದು ಮುಖ್ಯವಾಗುತ್ತದೆ ಎಂದು ತಿಳಿಸಿದ್ದಾರೆ.
ಇವು ಆಡಳಿತಾತ್ಮಕ ನಿರ್ಧಾರಗಳಲ್ಲಿ ಕನ್ನಡಪರವಾದ ಸೂಚನೆಗಳನ್ನು ನೀಡುವ ಅಧಿಕಾರವನ್ನು ಹೊಂದಿರಬೇಕಾಗುತ್ತದೆ. ಈ ನಿಟ್ಟಿನಲ್ಲಿ ಪಾಲಿಕೆ ಆಲೋಚಿಸುವುದು ಮುಖ್ಯ. ಮುಂದಿನ ದಿನಗಳಲ್ಲಿ ಪಾಲಿಕೆಯು ಹಾದು ಹೋಗಲಿರುವ ರೂಪಾಂತರ ಪ್ರಕ್ರಿಯೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕನ್ನಡದ ಅಸ್ತಿತ್ವವನ್ನು ಉಳಿಸಬೇಕಾದರೆ ಈ ಘಟಕಗಳು ಕ್ರಿಯಾಶೀಲವಾಗಿ ಕೆಲಸ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.





