ಕನ್ನಡ ರಾಜ್ಯೋತ್ಸವ : ಪ್ರಾಧಿಕಾರದ ಪುಸ್ತಕಗಳಿಗೆ ಶೇ.50ರಷ್ಟು ರಿಯಾಯಿತಿ

ಸಾಂದರ್ಭಿಕ ಚಿತ್ರ
ಬೆಂಗಳೂರು : ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50ರಷ್ಟು ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತದೆ.
ನಗರದ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಪ್ರಾಧಿಕಾರದ ವೆಬ್ಸೈಟ್ https://kpp.karnataka.gov.in ಮೂಲಕ ಆನ್ಲೈನ್ನಲ್ಲಿಯೂ ಖರೀದಿಸಬಹುದು.
ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಮುದ್ರಿಸಿ ಪ್ರಕಟಿಸಿದೆ.
ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶವನ್ನು ಕನ್ನಡ ಪುಸ್ತಕ ಪ್ರಾಧಿಕಾರ ಹೊಂದಿದೆ ಎಂದು ಪ್ರಕಟಣೆ ತಿಳಿಸಿದೆ.






