ಕಾಂತಾರ ದೈವಪಾತ್ರಗಳ ಅಪಹಾಸ್ಯ : ರಣವೀರ್ ಸಿಂಗ್ ಕ್ಷಮಾಪಣಾ ಪ್ರಮಾಣಪತ್ರಕ್ಕೆ ದೂರುದಾರರ ಆಕ್ಷೇಪ

ಬೆಂಗಳೂರು: ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರಗಳನ್ನು ಅಪಹಾಸ್ಯ ಮಾಡಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಕೃತ್ಯಕ್ಕೆ ಕ್ಷಮೆಯಾಚಿಸಿ ಬಾಲಿವುಡ್ ನಟ ರಣವೀರ್ ಸಿಂಗ್ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಯಾವುದೇ ರೀತಿಯ ಪ್ರಾಮಾಣಿಕ ಪಶ್ಚಾತ್ತಾಪ ವ್ಯಕ್ತಪಡಿಸಲಾಗಿಲ್ಲ ಎಂದು ದೂರುದಾರರ ಪರ ವಕೀಲರು ಆಕ್ಷೇಪಿಸಿದರು.
ದೈವಗಳನ್ನು ಅಪಹಾಸ್ಯ ಮಾಡಿದ, ಚಾವುಂಡಿ ದೈವವನ್ನು 'ಹೆಣ್ಣು ದೆವ್ವ' ಎಂದು ಕರೆದ ಆರೋಪ ಸಂಬಂಧ ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ದಾಖಲಾಗಿರುವ ಖಾಸಗಿ ದೂರು ಹಾಗೂ ಹೈಗ್ರೌಂಡ್ಸ್ ಠಾಣೆ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ರಣವೀರ್ ಸಿಂಗ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ವಿಚಾರಣೆ ಆರಂಭವಾಗುತ್ತಿದ್ದಂತೆ ರಣವೀರ್ ಪರ ಹಿರಿಯ ವಕೀಲ ಸಜನ್ ಪೂವಯ್ಯ ಹಾಜರಾಗಿ, ಅರ್ಜಿದಾರರ ಕ್ಷಮೆಯಾಚನೆಯ ಪ್ರಮಾಣಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಮೈಸೂರಿನಲ್ಲಿರುವ ದೇವಸ್ಥಾನಕ್ಕೂ ಭೇಟಿ ನೀಡುವುದಾಗಿ ಅರ್ಜಿದಾರರು ಪ್ರಮಾಣಪತ್ರದಲ್ಲಿ ಭರವಸೆ ನೀಡಿದ್ದಾರೆ ಎಂದರು.
ಇದನ್ನು ಆಲಿಸಿದ ನ್ಯಾಯಪೀಠ, ದೂರುದಾರರ ತೃಪ್ತಿಗೆ ಅನುಗುಣವಾಗಿ ಪ್ರಮಾಣಪತ್ರ ಸಲ್ಲಿಸುವಂತೆ ಮೌಖಿಕವಾಗಿ ಸೂಚಿಸಿ, ವಿಚಾರಣೆಯನ್ನು ಎ.23ಕ್ಕೆ ಮುಂದೂಡಿತು.





