Karnataka Budget | ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ

ಬೆಂಗಳೂರು : ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಅಡ್ಡ ಪರಿಣಾಮಗಳು ಬೀರುತ್ತಿದ್ದು, ಅದನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ 2026-27ನೇ ಬಜೆಟ್ ಭಾಷಣದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬ್ಲಾಕ್ ಸಂಪನ್ಮೂಲ ಕೇಂದ್ರಗಳಲ್ಲಿ (ಬಿಆರ್‍ಸಿ) ಪ್ರತಿ ಕೇಂದ್ರಕ್ಕೆ ಒಬ್ಬರು ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರನ್ನು ನೇಮಿಸಲಾಗುತ್ತದೆ. ಶಾಲಾ-ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ವಿಧಿಸಲಾಗುತ್ತದೆ ಎಂದರು.
ಶಿಕ್ಷಣ ಇಲಾಖೆಯಲ್ಲಿ ಆನ್‍ಲೈನ್‍ಗೆ ಒತ್ತು:
•ವಿದ್ಯಾರ್ಥಿಗಳಿಗೆ ನೀಡಲಾಗುವ ವಿವಿಧ ಸವಲತ್ತುಗಳು ಮೊದಲ ಬಾರಿಗೆ ನೇರ ನಗದು ವರ್ಗಾವಣೆ
•ಖಾಸಗಿ ಶಾಲೆಗಳ ಮಾನ್ಯತೆಗೆ ಆನ್ಲೈನ್ ಮೂಲಕ ದಾಖಲೆ ಸಲ್ಲಿಸಲು ಸರಳೀಕರಣ
•ವಿದ್ಯಾರ್ಥಿಗಳಿಗೆ ಗ್ರಾಮೀಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರಗಳನ್ನು ಆನ್-ಲೈನ್ ಮೂಲಕ ವಿತರಣೆ
•ಐಐಟಿ ಧಾರವಾಡದ ಸಹಯೋಗದೊಂದಿಗೆ ಪ್ರೌಢ ಶಾಲಾ ಮಕ್ಕಳ ಕಲಿಕೆಗೆ ಎಐ ತಂತ್ರಜ್ಞಾನ ಅಳವಡಿಕೆ- 5 ಕೋಟಿ ರೂ. ಖರ್ಚು
•ವಿದ್ಯಾವಿಕಾಸ ಯೋಜನೆಯಡಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಚಟುವಟಿಕೆ ಪುಸ್ತಕ, 1 ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕ, ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳ ಉಚಿತ ವಿತರಣೆ






