Karnataka SIR | ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ: ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದ ಪರಿಷ್ಕೃತ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ಪ್ರಕಟಿಸಿದೆ. ಈ ಪರಿಷ್ಕರಣೆಗೆ 2026ರ ಅಕ್ಟೋಬರ್ 1 ಅನ್ನು ಅರ್ಹತಾ ದಿನಾಂಕವಾಗಿ ನಿಗದಿಪಡಿಸಲಾಗಿದೆ.
ಈ ಸಂಬಂಧ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯು ಶುಕ್ರವಾರ ಸುತ್ತೋಲೆ ಹೊರಡಿಸಿದೆ. ಇದನ್ನು ಬೆಂಗಳೂರು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಬಿಎ ಮುಖ್ಯ ಆಯುಕ್ತರು, ರಾಜ್ಯದ ಎಲ್ಲ ಜಿಲ್ಲಾ ಚುನಾವಣಾ ಅಧಿಕಾರಿಗಳು ಮತ್ತು ಉಪ ಆಯುಕ್ತರು, ಬಿಬಿಎಂಪಿ ಕೇಂದ್ರ, ಉತ್ತರ ಹಾಗೂ ದಕ್ಷಿಣ ಚುನಾವಣಾ ಜಿಲ್ಲೆಗಳ ಹೆಚ್ಚುವರಿ ಜಿಲ್ಲಾ ಚುನಾವಣಾ ಅಧಿಕಾರಿಗಳು, ಬೆಂಗಳೂರು ನಗರ ನಿಗಮಗಳ ಉತ್ತರ, ದಕ್ಷಿಣ ಹಾಗೂ ಮಧ್ಯ ವಲಯಗಳ ಆಯುಕ್ತರು ಮತ್ತು ಬೆಂಗಳೂರು ನಗರದ ಹೆಚ್ಚುವರಿ ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಉಪ ಆಯುಕ್ತರಿಗೆ ಕಳುಹಿಸಿ, ಪರಿಷ್ಕೃತ ವೇಳಾಪಟ್ಟಿಯಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಚುನಾವಣಾ ಆಯೋಗದ ಆಗಸ್ಟ್ 7, 2026ರ ಪತ್ರದಂತೆ, ಕರ್ನಾಟಕದಲ್ಲಿ ಅಕ್ಟೋಬರ್ 1, 2026 ಅನ್ನು ಅರ್ಹತಾ ದಿನಾಂಕವಾಗಿ ನಿಗದಿಪಡಿಸಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಪರಿಷ್ಕೃತ ವೇಳಾಪಟ್ಟಿಯಂತೆ, ಮತಗಟ್ಟೆ ಮಟ್ಟದ ಅಧಿಕಾರಿಗಳು (BLO) ಜೂನ್ 30ರಿಂದ ಆಗಸ್ಟ್ 17ರವರೆಗೆ ಮನೆ–ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಆಗಸ್ಟ್ 17ರಂದು ಮತದಾನ ಕೇಂದ್ರಗಳ ಮರುಹೊಂದಾಣಿಕೆ ಹಾಗೂ ಮರುಜೋಡಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ಆಕ್ಷೇಪಣೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಸಲ್ಲಿಸಬಹುದು. ಸಲ್ಲಿಕೆಯಾಗುವ ಹಕ್ಕು ಮತ್ತು ಆಕ್ಷೇಪಣೆಗಳ ಪರಿಶೀಲನೆ, ವಿಚಾರಣೆ ಹಾಗೂ ವಿಲೇವಾರಿ ಆಗಸ್ಟ್ 24ರಿಂದ ಅಕ್ಟೋಬರ್ 22ರವರೆಗೆ ನಡೆಯಲಿದೆ. ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.






