ಕೆಪಿಎಸ್‍ಸಿ: ಮೇ 6ರಿಂದ ಗೆಜೆಟೆಡ್ ಪ್ರೊಬೆಷನರ್ ಹುದ್ದೆಗಳಿಗೆ ವ್ಯಕ್ತಿತ್ವ ಪರೀಕ್ಷೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು(ಕೆಪಿಎಸ್‍ಸಿ) ಗ್ರೂಪ್-ಎ ಮತ್ತು ಬಿ ವೃಂದದ ಗೆಜೆಟೆಡ್ ಪ್ರೊಬೆಷನರ್ ಹುದ್ದೆಗಳಿಗೆ(ಕೆಎಎಸ್) ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ಮೇ 6 ರಿಂದ ಮೇ 10ರವರೆಗೆ ವ್ಯಕ್ತಿತ್ವ ಪರೀಕ್ಷೆಯನ್ನು ಹಾಗೂ ಮೂಲ ದಾಖಲೆಗಳ ಪರಿಶೀಲನೆಯನ್ನು ನಡೆಸಲಾಗುತ್ತದೆ.
2023-24ನೇ ಸಾಲಿನ 384 (ಉ.ಮೂ.ವೃಂದ-310 ಮತ್ತು ಹೈ.ಕ.-74) ಗ್ರೂಪ್-ಎ ಮತ್ತು ಬಿ ವೃಂದದ ಗೆಜೆಟೆಡ್ ಪ್ರೊಬೆಷನರ್ ಹುದ್ದೆಗಳಿಗೆ ಮುಖ್ಯ ಪರೀಕ್ಷೆಯಿಂದ ವ್ಯಕ್ತಿತ್ವ ಪರೀಕ್ಷೆಗೆ 1:3ರ ಅನುಪಾತದಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ವ್ಯಕ್ತಿತ್ವ ಪರೀಕ್ಷೆಯನ್ನು ಹಾಗೂ ಮೂಲ ದಾಖಲೆಗಳ ಪರಿಶೀಲನೆಯನ್ನು ನಡೆಸಲು ಆಯೋಗದ ಸಭೆಯಲ್ಲಿ ನಿರ್ಣಯಿಸಲಾಗಿದೆ.
ಅದರಂತೆ ಅರ್ಹ ಅಭ್ಯರ್ಥಿಗಳ ನೋಂದಣಿ ಸಂಖ್ಯೆ, ವ್ಯಕ್ತಿತ್ವ ಪರೀಕ್ಷೆಯ ದಿನಾಂಕ ಮತ್ತು ಸಮಯಗಳ ವಿವರಗಳನ್ನು ಅತಿ ಶೀಘ್ರದಲ್ಲಿ ಆಯೋಗದ ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು. ಹಾಗೆಯೇ ಅಭ್ಯರ್ಥಿಗಳಿಗೆ ಸೂಚನಾ ಪತ್ರಗಳನ್ನು ಶೀಘ್ರವಾಗಿ ರವಾನಿಸಲಾಗುವುದು ಎಂದು ಆಯೋಗದ ಕಾರ್ಯದರ್ಶಿ ಜ್ಯೋತಿ ಕೆ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.




