ಕೆಪಿಎಸ್ಸಿ ನೇಮಕಾತಿ ಹಗರಣ; ಗಂಗ್ವಾರ್ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ಕೋರಿದ ಸಿಐಡಿ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್ಸಿ) ನೇಮಕಾತಿ ಆಕ್ರಮ ಪ್ರಕರಣಕ್ಕೆ ಆರೋಪಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅಪರಾಧ ತನಿಖಾ ದಳದ(ಸಿಐಡಿ) ಅಧಿಕಾರಿಗಳು ರಾಜ್ಯ ಸರಕಾರದ ಅನುಮತಿ ಕೋರಿದ್ದಾರೆ ಎಂದು ವರದಿಯಾಗಿದೆ.
ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಭ್ಯರ್ಥಿಗಳಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿದ ಆರೋಪಗಳ ಹಿನ್ನೆಲೆಯಲ್ಲಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವನ್ನು ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಕೆಪಿಎಸ್ಸಿಯಲ್ಲಿ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದ ಗಂಗ್ವಾರ್ ಅವರು ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಪರೀಕ್ಷೆಗೆ ಮುನ್ನವೇ ಪ್ರಶ್ನೆಪತ್ರಿಕೆ ಮತ್ತು ಉತ್ತರಗಳನ್ನು ಸೋರಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮುಂದಿನ ಕಾನೂನು ಪ್ರಕ್ರಿಯೆ ಕೈಗೊಳ್ಳಲು ಅಗತ್ಯವಿರುವ ಪ್ರಾಸಿಕ್ಯೂಷನ್ ಅನುಮತಿಯನ್ನು ಪಡೆಯಲು ಸಿಐಡಿ ಅಧಿಕಾರಿಗಳು ಸರಕಾರಕ್ಕೆ ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ.




