ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು: ಕಾಂಗ್ರೆಸ್ ನಾಯಕರು ಹೇಳಿದ್ದೇನು?

ಸಾಂದರ್ಭಿಕ ಚಿತ್ರ | PC : PTI
ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಗುರುವಾರ ವಿಧಾನಸೌಧದಲ್ಲಿ ನಡೆದ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್-5, ಬಿಜೆಪಿ-2 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಜೆಡಿಎಸ್ ಅಭ್ಯರ್ಥಿ ಪರಾಭವಗೊಂಡಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಬಿ.ಕೆ.ಹರಿಪ್ರಸಾದ್, ಬಿ.ಎಸ್.ಶಿವಣ್ಣ, ತಿಪ್ಪಣ್ಣಪ್ಪ ಕಮಕನೂರ್, ಪಿ.ವಿ.ಮೋಹನ್ ಹಾಗೂ ವಿನಯ್ ಕಾರ್ತಿಕ್ ಪ್ರಕಾಶ್, ಬಿಜೆಪಿಯಿಂದ ಲಿಂಗರಾಜ್ ಪಾಟೀಲ್, ರಘು ಕೌಟಿಲ್ಯ ಗೆಲುವು ಸಾಧಿಸಿದ್ದು, ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದ ಗೋವಿಂದರಾಜು ಸೋಲು ಕಂಡಿದ್ದಾರೆ.
ವಿಧಾನಸಭೆಯಲ್ಲಿನ ಸಂಖ್ಯಾಬಲದ ಆಧಾರದಲ್ಲಿ ಕಾಂಗ್ರೆಸ್ ನಾಲ್ಕು ಹಾಗೂ ಬಿಜೆಪಿ ಎರಡು ಸ್ಥಾನಗಳಲ್ಲಿ ಸುಲಭ ಗೆಲುವು ಸಾಧಿಸಲು ಅವಕಾಶವಿತ್ತು. ಆದರೆ, ಕಾಂಗ್ರೆಸ್ ಪಕ್ಷವು ಐದನೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಸ್ಪರ್ಧೆ ಏರ್ಪಟ್ಟಿತ್ತು.
‘ವಿಧಾನ ಪರಿಷತ್ತು ರಾಜ್ಯದ ಶಾಸನಾತ್ಮಕ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿದ್ದು, ಜನಪರ ಕಾನೂನುಗಳ ಪರಿಶೀಲನೆ, ನೀತಿಗಳ ಪರಿಷ್ಕರಣೆ ಹಾಗೂ ಆಡಳಿತಾತ್ಮಕ ಕಾರ್ಯವೈಖರಿಯ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಸದನ. ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಮ್ಮ ಪಕ್ಷದ ನೂತನ ಸದಸ್ಯರು, ತಮ್ಮ ಅನುಭವ, ಬದ್ಧತೆ ಮತ್ತು ಜನಪರ ಕಾಳಜಿಯ ಮೂಲಕ ರಾಜ್ಯದ ಜನರ ಆಶೋತ್ತರಗಳಿಗೆ ಸ್ಪಂದಿಸಿ, ರಾಜ್ಯದ ಹಿತಾಸಕ್ತಿಗಳನ್ನು ಸಮರ್ಥವಾಗಿ ಪ್ರತಿನಿಧಿಸುವುದರೊಂದಿಗೆ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸಲಿದ್ದಾರೆ ಎಂಬ ವಿಶ್ವಾಸವಿದೆ’
-ಡಾ.ಜಿ.ಪರಮೇಶ್ವರ್, ಉಪಮುಖ್ಯಮಂತ್ರಿ
"ವಿಧಾನ ಪರಿಷತ್ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ.ಹರಿಪ್ರಸಾದ್, ಪಿ.ವಿ.ಮೋಹನ್, ಶಿವಣ್ಣ ಮಳವಳ್ಳಿ, ತಿಪ್ಪಣ್ಣಪ್ಪ ಕಮಕನೂರ್ ಹಾಗೂ ವಿನಯ್ ಕಾರ್ತಿಕ್ ಅವರಿಗೆ ಅಭಿನಂದನೆಗಳು. ತಮಗೆ ದೊರೆತ ಈ ಅಭೂತಪೂರ್ವ ಗೆಲುವು ಜನಪರ ಕಾರ್ಯಗಳ ಮೂಲಕ ಸಾರ್ಥಕಗೊಳ್ಳಲಿ ಎಂದು ಹಾರೈಸುತ್ತೇನೆ"
ಸಿದ್ದರಾಮಯ್ಯ, ಮುಖ್ಯಮಂತ್ರಿ
‘ನಮ್ಮ ಪಕ್ಷದ ಸಾಧನೆ ನೋಡಿ ಪ್ರತಿಪಕ್ಷಗಳ ಸದಸ್ಯರು ನಮಗೆ ಮತ ಹಾಕಿದ್ದಾರೆ. ಜೆಡಿಎಸ್-ಬಿಜೆಪಿ ಎರಡೂ ಪಕ್ಷಗಳ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ. ‘ಪಾರ್ಟಿ ವಿಥ್ ಡಿಪರೆನ್ಸ್’ ಎಂದು ಕರೆಸಿಕೊಳ್ಳುವ ಬಿಜೆಪಿಯಿಂದಲೂ ಅಡ್ಡ ಮತದಾನ ಆಗಿದೆ’
-ಬಿ.ಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷ, ಕಾಂಗ್ರೆಸ್ ಅಭ್ಯರ್ಥಿ
‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಡಾ.ಶರಣಪ್ರಕಾಶ್ ಪಾಟೀಲ್, ಈಶ್ವರ್ ಖಂಡ್ರೆ ಎಲ್ಲರಿಗೂ ಧನ್ಯವಾದಗಳು. ಪ್ರಿಯಾಂಕ್ ಖರ್ಗೆ ಇಲ್ಲದೆ ಇದ್ದಿದ್ದರೆ ನನಗೆ ಅವಕಾಶ ಸಿಗುತ್ತಿರಲಿಲ್ಲ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೋಲಿ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರಿಗೆ ಅನುಕೂಲ ಮಾಡಿಕೊಡಲು ನನಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಸದನದ ಒಳಗೆ ಹಾಗೂ ಸರಕಾರದ ಮಟ್ಟದಲ್ಲಿ ಅವಕಾಶ ವಂಚಿತರ ಧ್ವನಿಯಾಗಿ ಕೆಲಸ ಮಾಡುತ್ತೇನೆ’
-ತಿಪ್ಪಣ್ಣಪ್ಪ ಕಮಕನೂರು, ಕಾಂಗ್ರೆಸ್ ಅಭ್ಯರ್ಥಿ






