ನೈಸರ್ಗಿಕ ಕೃಷಿ ಪದ್ಧತಿ ಎಲ್ಲರ ಪಾಲಿಗೆ ಜೀವನೋಪಾಯವಾಗಲಿ: ಡಾ. ಶರಣಪ್ರಕಾಶ ಪಾಟೀಲ್

ಬೆಂಗಳೂರು, ಜ.21: ಕರ್ನಾಟಕದಲ್ಲಿ ಜೀವನೋಪಾಯಕ್ಕೆ, ಅದರಲ್ಲೂ ವಿಶೇಷವಾಗಿ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದರೊಂದಿಗೆ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸಲು ವಿಶೇಷ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ಕರ್ನಾಟಕ ಸರ್ಕಾರದ ಜೀವನೋಪಾಯ ಹಾಗೂ ಉದ್ಯಮಶೀಲತೆ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ **“ನೈಸರ್ಗಿಕ ಕೃಷಿ ಕುರಿತ ರಾಷ್ಟ್ರೀಯ ಸಮಾವೇಶ”**ದಲ್ಲಿ ಬುಧವಾರ ಬೆಂಗಳೂರಿನ ಅಶೋಕ ಹೋಟೆಲ್‌ನಲ್ಲಿ ಮಾತನಾಡಿದ ಅವರು, ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳೆಯರ ಪ್ರಾಬಲ್ಯ ಹೆಚ್ಚುತ್ತಿರುವುದನ್ನು ಗಮನಿಸಬಹುದಾಗಿದೆ. ನೈಸರ್ಗಿಕ ಕೃಷಿ ಪದ್ಧತಿಯಲ್ಲಿಯೂ ಮಹಿಳೆಯರು ಗಮನಾರ್ಹ ಯಶಸ್ಸು ಸಾಧಿಸುತ್ತಿದ್ದು, ಈ ರೂಪಾಂತರದ ಕೇಂದ್ರಬಿಂದುವಾಗಿ ಮಹಿಳೆಯರೇ ಇದ್ದಾರೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ – ಸಂಜೀವಿನಿ ಯೋಜನೆಯ ಮೂಲಕ ಮಹಿಳಾ ಸ್ವಸಹಾಯ ಗುಂಪುಗಳು ರಾಸಾಯನಿಕಮುಕ್ತ, ಕಡಿಮೆ ವೆಚ್ಚದ ನೈಸರ್ಗಿಕ ಕೃಷಿಯನ್ನು ಅನುಸರಿಸುತ್ತಿವೆ. ಕೃಷಿ ಸಖಿಗಳು ಮತ್ತು ಸಮುದಾಯ ಸಂಪನ್ಮೂಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸುವುದರೊಂದಿಗೆ, ಜೈವಿಕ ಇನ್‌ಪುಟ್ ಉತ್ಪಾದನೆ ಹಾಗೂ ಮೌಲ್ಯವರ್ಧನೆಯಲ್ಲಿ ಪ್ರಮುಖ ಉದ್ಯಮಗಳನ್ನು ನಡೆಸುತ್ತಿರುವುದು ಗಮನಾರ್ಹವಾಗಿದೆ ಎಂದು ಡಾ. ಪಾಟೀಲ್ ವಿವರಿಸಿದರು.
ನೈಸರ್ಗಿಕ ಕೃಷಿ ಪದ್ಧತಿಗಳು ಮಹಿಳೆಯರಿಗೆ ಕೌಶಲ್ಯಾಧಾರಿತ ಹಾಗೂ ಗೌರವಾನ್ವಿತ ಗ್ರಾಮೀಣ ಉದ್ಯೋಗಗಳನ್ನು ಸೃಷ್ಟಿಸಿವೆ. ಸುಮಾರು 5.26 ಲಕ್ಷ ಸ್ವಸಹಾಯ ಗುಂಪುಗಳ ಸದಸ್ಯರು ಮಣ್ಣಿನ ಆರೋಗ್ಯ ನಿರ್ವಹಣೆ, ಹವಾಮಾನ–ಸ್ಥಿತಿಸ್ಥಾಪಕ ಬೆಳೆ ಪದ್ಧತಿಗಳು, ಸಂಸ್ಕರಣೆ, ಬ್ರ್ಯಾಂಡಿಂಗ್ ಹಾಗೂ ಮಾರುಕಟ್ಟೆ ಸಂಪರ್ಕಗಳಲ್ಲಿ ಕೌಶಲ್ಯ ಪಡೆದುಕೊಳ್ಳುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಕೃಷಿ ಇಲಾಖೆಯಲ್ಲಿ ಈಗಾಗಲೇ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ನೈಸರ್ಗಿಕ ಕೃಷಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಆದ್ಯತೆ ನೀಡಲಾಗುವುದು ಎಂದು ಹೇಳಿದರು. ರಾಜ್ಯದಲ್ಲಿ ಕೃಷಿ ವಲಯಕ್ಕೆ ಸಮರ್ಪಕ ಅನುದಾನ ಒದಗಿಸಲಾಗುತ್ತಿದ್ದು, ರೈತರು ಹಾಗೂ ವಿಶೇಷವಾಗಿ ರೈತ ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್, ಜಂಟಿ ಕಾರ್ಯದರ್ಶಿ ಸ್ವಾತಿ ಶರ್ಮಾ, ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಅಭಿಯಾನದ ನಿರ್ದೇಶಕಿ ಆರ್. ಸ್ನೇಹಲ್, ಹೆಚ್ಚುವರಿ ಅಭಿಯಾನ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಹಲವು ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.







