ಎಸೆಸೆಲ್ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕವನ್ನೇ ನೀಡಿ; ಸರಕಾರಕ್ಕೆ ಹೈಕೋರ್ಟ್ ಮತ್ತೊಮ್ಮೆ ಆದೇಶ

Photo credit: PTI
ಬೆಂಗಳೂರು: ಪ್ರಸಕ್ತ ಸಾಲಿನ (2025-2026) ಎಸೆಸೆಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನೇ ನೀಡುವಂತೆ ಹೈಕೋರ್ಟ್ ಮತ್ತೊಮ್ಮೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಇದರಿಂದ, ಇದೇ ಶೈಕ್ಷಣಿಕ ವರ್ಷದಿಂದಲೇ ಗ್ರೇಡ್ ನೀಡಲು ಮುಂದಾಗಿದ್ದ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್ಇಎಬಿ) ನಡೆಸುವ ಎಸೆಸೆಲ್ಸಿ ಪರೀಕ್ಷೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ನಿರ್ದೇಶಿಸಿ ಏಪ್ರಿಲ್ 15ರಂದು ಹೊರಡಿಸಿರುವ ಆದೇಶ ಮರುಪರಿಶೀಲಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠಕ್ಕೆ ಮಂಗಳವಾರ ವಿಚಾರಣೆ ನಡೆಸಿತು.
ಅರ್ಜಿ ಕುರಿತು ಸರ್ಕಾರದ ವಾದ ಆಲಿಸಿದ ಬಳಿಕ ನ್ಯಾಯಪೀಠ, ರಾಜ್ಯ ಸರ್ಕಾರ ಎಸೆಸೆಲ್ಸಿ ಪರೀಕ್ಷೆ ಮುಗಿದ ಬಳಿಕ ಅಂದರೆ 2026ರ ಏಪ್ರಿಲ್ 10ರಂದು ಕರಡು ಅಧಿಸೂಚನೆ ಪ್ರಕಟಿಸಿದೆ. ಈ ಸಂಬಂಧ ಇನ್ನೂ ಅಂತಿಮ ಅಧಿಸೂಚನೆ ಹೊರಡಿಸಿಲ್ಲ. ಕಾನೂನಿನ ಅನ್ವಯ ನಿಯಮಗಳು ಜಾರಿಯಲ್ಲಿ ಇಲ್ಲದಿರುವುದರಿಂದ, ದಾಖಲೆಯಲ್ಲಿ ಯಾವುದೇ ಲೋಪ ಕಾಣದೇ ಇರುವುದರಿಂದ ಹಿಂದಿನ ಆದೇಶದಲ್ಲಿ ಮಧ್ಯಪ್ರವೇಶಿಸಲು ಬಯಸುವುದಿಲ್ಲ ಎಂದು ತಿಳಿಸಿ ಮರುಪರಿಶೀಲನಾ ಅರ್ಜಿ ಇತ್ಯರ್ಥಪಡಿಸಿತು.
ಸರ್ಕಾರ 2025ರ ಅಕ್ಟೋಬರ್ 28ರಂದು ಎಸೆಸೆಲ್ಸಿ ಪರೀಕ್ಷೆ ನಡೆಸುವ ಸಂಬಂಧ ಸುತ್ತೋಲೆ ಹೊರಡಿಸಿದ್ದು, ಅದರ ಅನ್ವಯ ಪರೀಕ್ಷೆ ನಡೆಸಬೇಕು. ಏಪ್ರಿಲ್ 2ರಂದು ಎಸೆಸೆಲ್ಸಿ ಪರೀಕ್ಷೆಗಳು ಮುಗಿದಿದ್ದು, ಆನಂತರ ರಾಜ್ಯ ಸರ್ಕಾರ ಕರಡು ನಿಯಮಗಳನ್ನು ಪ್ರಕಟಿಸಿದೆ. ಕರಡು ನಿಯಮಗಳಿಗೆ ಸಂಬಂಧಿಸಿದಂತೆ ಸರ್ಕಾರ ಇನ್ನಷ್ಟೇ ಕ್ರಮಕೈಗೊಳ್ಳಬೇಕಿದ್ದು, ಭವಿಷ್ಯದಲ್ಲಿ ಈ ಸಂಬಂಧ ರಾಜ್ಯ ಸರ್ಕಾರ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಬಹುದಾಗಿದೆ. ಈ ವಿಚಾರದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವುದಿಲ್ಲ ಎಂದೂ ನ್ಯಾಯಪೀಠ ಸ್ಪಷ್ಟಪಡಿಸಿದೆ.
ಸರ್ಕಾರದ ವಾದವೇನು?
ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡೊಸಿದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ಕಳೆದ ವರ್ಷ 1.5 ಲಕ್ಷ-1.75 ಲಕ್ಷ ವಿದ್ಯಾರ್ಥಿಗಳು ತೃತೀಯ ಭಾಷಾ ವಿಷಯದಲ್ಲಿ ಅನುತ್ತೀರ್ಣರಾಗಿದ್ದಾರೆ. ಬೇರೆ ರಾಜ್ಯಗಳಂತೆ ಕರ್ನಾಟದಲ್ಲಿ ದ್ವಿಭಾಷಾ ನೀತಿಯಿಲ್ಲ. ಇಲ್ಲಿ ತ್ರಿಭಾಷಾ ನೀತಿಯಿದೆ. ಗ್ರೇಡ್ ನೀಡುವುದರಿಂದ ಯಾವುದೇ ಸಮಸ್ಯೆಯಾಗುವುದಿಲ್ಲ. 15-16ನೇ ವಯಸ್ಸಿನಲ್ಲಿ ಅನುತ್ತೀರ್ಣರಾದರೆ ಮಕ್ಕಳಿಗೆ ಸಾಕಷ್ಟು ಒತ್ತಡವಾಗುತ್ತದೆ. ಗ್ರಾಮೀಣ ಪ್ರದೇಶದ ಶೇ.80 ವಿದ್ಯಾರ್ಥಿಗಳು ಹಿಂದಿ ವಿಷಯದಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ವಿದ್ಯಾರ್ಥಿಗಳ ಮೇಲಿನ ಒತ್ತಡ ಕಡಿಮೆ ಮಾಡಲು ಸರ್ಕಾರ ಈ ಕ್ರಮ ಕೈಗೊಂಡಿದೆ. ಕಾನೂನಿಗೆ ಸೂಕ್ತ ತಿದ್ದುಪಡಿ ತರಲು ಕರಡು ನಿಯಮಗಳನ್ನು ರೂಪಿಸಲಾಗಿದೆ. ಅಂಕದ ಬದಲು ಗ್ರೇಡ್ ನೀಡಲು ನಿರ್ಧಾರ ಮಾಡಲಾಗಿದೆ. ಕರಡು ನಿಯಮ ಪ್ರಶ್ನಿಸಿದ್ದ ಪಿಐಎಲ್ ವಜಾಗೊಳಿಸಿರುವ ವಿಭಾಗೀಯ ನ್ಯಾಯಪೀಠ, ಅರ್ಜಿದಾರರಿಗೆ ದಂಡ ವಿಧಿಸಿದೆ. ಆದ್ದರಿಂದ, ತೃತೀಯ ಭಾಷೆಗೆ ಅಂಕ ನೀಡಬೇಕೆನ್ನುವ ಆದೇಶವನ್ನು ಮರುಪರಿಶೀಲಿಸಬೇಕು ಎಂದು ಕೋರಿದರು.
ಪರೀಕ್ಷೆಯ ಅಗತ್ಯವೇನು?
ಸರ್ಕಾರದ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಎಸೆಸೆಲ್ಸಿ ಪರೀಕ್ಷೆ ಅಧಿಸೂಚನೆ ಹೊರಡಿಸಿದಾಗಲೇ ಇದನ್ನು ಸ್ಪಷ್ಟಪಡಿಸಬೇಕಿತ್ತು. ಅಧಿಸೂಚನೆಯಲ್ಲಿಲ್ಲದ ಗ್ರೇಡ್ ಪದ್ದತಿಯನ್ನು ಈಗ ಅನುಷ್ಠಾನಗೊಳಿಸುತ್ತಿದ್ದೀರಿ. ತಮಿಳು, ಉರ್ದು, ತೆಲುಗು ಮೊದಲ ಭಾಷೆಯಾಗಿರುವ ಕೆಲ ಶಾಲೆಗಳಲ್ಲಿ ಕನ್ನಡ ತೃತೀಯ ಭಾಷೆಯಾಗಿದೆ. ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್ ನೀಡಿದರೆ ಕನ್ನಡವನ್ನು ತೃತೀಯ ಭಾಷೆಯಾಗಿ ಕಲಿಯುತ್ತಿರುವವರ ಮೇಲಾಗುವ ಪರಿಣಾಮಗಳನ್ನೂ ಯೋಚಿಸಿ ಎಂದು ಸೂಚ್ಯವಾಗಿ ಕಿವಿಮಾತು ಹೇಳಿತು.
ಮುಂದುವರಿದು, ಪಿಯುಸಿಯಲ್ಲಿ ಈಗ ಶೇ.83 ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಿದ್ದಾರೆ. ನೀವು ಎಲ್ಲರನ್ನೂ ಪಾಸ್ ಮಾಡಬೇಕೆಂದಿದ್ದರೆ ಪರೀಕ್ಷೆಯನ್ನೇ ರದ್ದು ಮಾಡಬಹುದಲ್ಲವೇ ಎಂದು ಪ್ರಶ್ನಿಸಿದ ನ್ಯಾಯಪೀಠ, ಸರ್ಕಾರ ಮುಂದಿನ ಶೈಕ್ಷ ಣಿಕ ವರ್ಷಕ್ಕೆ ಸೂಕ್ತವೆನ್ನಿಸಿದ ಕಾನೂನು ರೂಪಿಸಲು ಸ್ವತಂತ್ರವಾಗಿದೆ. ಆದರೆ, ಪ್ರಸಕ್ತ ಸಾಲಿಗೆ ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಬೇಕು ಎಂದು ಸರ್ಕಾರಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿ ಅರ್ಜಿ ಇತ್ಯರ್ಥಪಡಿಸಿತು.
ಪ್ರಕರಣದ ಹಿನ್ನೆಲೆ:
ಎಸೆಸೆಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಮತ್ತು ರಾಷ್ಟ್ರೀಯ ಕೌಶಲ ಅರ್ಹತಾ ಚೌಕಟ್ಟು (ಎನ್ಎಸ್ಕ್ಯೂಎಫ್) ವಿಷಯಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪರೀಕ್ಷೆ ನಡೆಯುತ್ತಿದ್ದ ಸಂದರ್ಭದಲ್ಲಿ (ಮಾರ್ಚ್ 28) ಪ್ರಕಟಿಸಿದ್ದರು. ಇದನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರಾದ ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ್, ಉಡುಪಿಯ ಅನುಷಾ ಹಾಗೂ ಸುಧಿಕ್ಷಾ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಅರ್ಜಿಯನ್ನು ಏಪ್ರಿಲ್ 15ರಂದು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ, 2025-2026ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಅಧಿಸೂಚನೆ ಹೊರಡಿಸಿದ ಸಂದರ್ಭದಲ್ಲಿ ಚಾಲ್ತಿಯಲ್ಲಿದ್ದ ನಿಯಮದಂತೆ ಮೌಲ್ಯಮಾಪನ ನಡೆಸಬೇಕು. ಹಿಂದಿ ಸೇರಿ ತೃತೀಯ ಭಾಷೆಗಳ ವಿಷಯಗಳಿಗೆ ಗ್ರೇಡ್ ಬದಲಾಗಿ ಅಂಕ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿತ್ತು. ಈ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಸರ್ಕಾರ ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು.






