ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯತ್ತ ಸಚಿವ ದಿನೇಶ್ ಗುಂಡೂರಾವ್ ಚಿತ್ತ
ರಾಜ್ಯ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸಭೆ

ಬೆಂಗಳೂರು, ಜೂ.10: ದ.ಕ. ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ರಾಜ್ಯ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಮಂಗಳೂರಿನಲ್ಲಿ 12 ಬೀಚ್ ಗಳ ಅಭಿವೃದ್ಧಿ ಕಾರ್ಯಗಳ ಪ್ರಗತಿ ಕುರಿತು ಮಾಹಿತಿ ಪಡೆದ ಸಚಿವರು, ಖಾಸಗಿ ಸಹಭಾಗಿತ್ವದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸುವಂತೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಿಗೆ ಸೂಚನೆ ನೀಡಿದರು. ವಿಶೇಷವಾಗಿ ಜಿಲ್ಲೆಯಲ್ಲಿ ಹೋಮ್ ಸ್ಟೇ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಮೊಗವೀರ ಮಹಾಜನ ಸಭಾ ಅಧ್ಯಕ್ಷರು, ಬ್ಯಾರಿ, ತುಳು ಅಕಾಡಮಿ ಅಧ್ಯಕ್ಷರು ಸಭೆಯಲ್ಲಿ ಪಾಲ್ಗೊಂಡಿದ್ದರು. ಪಾರ್ಕಿಂಗ್ ಸೇರಿದಂತೆ ಮಂಗಳೂರಿನ ಪ್ರವಾಸೋದ್ಯಮ ಅಭಿವೃದ್ಧಿಗೆ ಇರುವ ಸಮಸ್ಯೆಗಳ ಪರಿಹಾರ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಮತ್ತೊಂದು ಸುತ್ತಿನ ಸಭೆ ನಡೆಸಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಗಳ ಅನುಷ್ಢಾನ ಕುರಿತು ಅಂತಿಮ ನಿರ್ಣಯಗಳನ್ನು ತೆಗೆದುಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.