‘ಕಂದಾಯ ಸಚಿವ ಕೃಷ್ಣ ಬೈರೇಗೌಡ ನಾಪತ್ತೆ’ ಎಂಬ ಭಿತ್ತಿಪತ್ರ ವೈರಲ್: ಎಫ್ಐಆರ್ ದಾಖಲು

ಕೃಷ್ಣ ಬೈರೇಗೌಡ
ಬೆಂಗಳೂರು : ಅಪರಿಚಿತ ವ್ಯಕ್ತಿಗಳು ‘ಕಂದಾಯ ಸಚಿವ ಕೃಷ್ಣ ಬೈರೇಗೌಡ ನಾಪತ್ತೆಯಾಗಿದ್ದಾರೆ’ ಎಂದು ನಗರದ ಸಾರ್ವಜನಿಕ ಸ್ಥಳಗಳಲ್ಲಿ ಭಿತ್ತಿಪತ್ರಗಳನ್ನು ಅಂಟಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ರಸ್ತೆ ಬದಿಯ ವಿದ್ಯುತ್ ಪರಿವರ್ತಕಗಳು(ಟ್ರಾನ್ಸ್ ಫಾರ್ಮರ್) ಮತ್ತು ಗೋಡೆಗಳ ಮೇಲೆ ಭಿತ್ತಿಪತ್ರಗಳನ್ನು ಅಂಟಿಸಿ ಸಾರ್ವಜನಿಕ ಆಸ್ತಿಯನ್ನು ಹಾಳು ಮಾಡಲಾಗಿದೆ. ನಗರದ ಸೌಂದರ್ಯಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬ್ಯಾಟರಾಯನಪುರ ಉಪವಿಭಾಗದ ಸಹಾಯಕ ಎಂಜಿನಿಯರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಈ ಪೋಸ್ಟರ್ಗಳನ್ನು ಯಾರು ಅಂಟಿಸಿದ್ದಾರೆ ಎಂಬುದು ಇದುವರೆಗೂ ತಿಳಿದುಬಂದಿಲ್ಲ. ಆದರೆ ಪೋಸ್ಟರ್ಗಳು ಪತ್ತೆಯಾದ ಸ್ಥಳಗಳಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಪೋಸ್ಟರ್ಗಳ ಹಿಂದೆ ಇರುವ ವ್ಯಕ್ತಿಗಳನ್ನು ಗುರುತಿಸಲು ಮತ್ತು ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.





