ಪಶು ಆಸ್ಪತ್ರೆಗೆ ಸಚಿವ ಪುಟ್ಟರಂಗಶೆಟ್ಟಿ ದಿಢೀರ್ ಭೇಟಿ; ಅಧಿಕಾರಿಗಳಿಗೆ ನೋಟಿಸ್

ಬೆಂಗಳೂರು : ಬೆಂಗಳೂರಿನ ಕಂಟೋನ್ಮೆಂಟ್ನಲ್ಲಿರುವ ಪಶು ವೈದ್ಯಕೀಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಪಶುಸಂಗೋಪನೆ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ವೇಳೆ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿಗಳಿಗೆ ನೋಟಿಸ್ ನೀಡಲು ಸೂಚನೆ ನೀಡಿದ್ದಾರೆ.
ಶುಕ್ರವಾರ ಬೆಳಗ್ಗೆ ಆಸ್ಪತ್ರೆಗೆ ಭೇಟಿ ನೀಡಿದ ಅವರು ಸ್ಕ್ಯಾನಿಂಗ್ ವಿಭಾಗ, ಶಸ್ತ್ರಚಿಕಿತ್ಸಾ ಕೊಠಡಿ ಹಾಗೂ ಔಷಧ ವಿತರಣಾ ಕೊಠಡಿಗಳ ವ್ಯವಸ್ಥೆಗಳು ಮತ್ತು ಕಾರ್ಯನಿರ್ವಹಣೆಯ ಬಗ್ಗೆ ಪರಿಶೀಲನೆ ನಡೆಸಿದರು.
ಆಸ್ಪತ್ರೆಗೆ ಆಗಮಿಸುವ ಸಾರ್ವಜನಿಕರಿಗೆ ಶೌಚಾಲಯದ ವ್ಯವಸ್ಥೆ ಇಲ್ಲದಿರುವ ಬಗ್ಗೆ ಸಚಿವರ ಗಮನಕ್ಕೆ ತರಲಾಯಿತು. ಇದಕ್ಕೆ ಸ್ಪಂದಿಸಿದ ಸಚಿವರು, ಸಾರ್ವಜನಿಕರ ಅನುಕೂಲಕ್ಕಾಗಿ ಆಸ್ಪತ್ರೆ ಆವರಣದಲ್ಲಿ ಶೌಚಾಲಯ ನಿರ್ಮಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ನಿಗದಿತ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗದ ಉಪನಿರ್ದೇಶಕ ಡಾ.ಚಂದ್ರಶೇಖರ್ ಗೈರುಹಾಜರಿಯನ್ನು ಸಚಿವರು ಗಂಭೀರವಾಗಿ ಪರಿಗಣಿಸಿದಲ್ಲದೆ, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗೆ ನೋಟಿಸ್ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಆಯುಕ್ತ ಲಿಂಗರಾಜು ಸೇರಿದಂತೆ ಪ್ರಮುಖರಿದ್ದರು.




