ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯಕ್ಕೆ ಮಾದರಿ : ಸಚಿವ ಶಿವರಾಜ್ ತಂಗಡಗಿ

ಕನಕಗಿರಿ : ’ಸಂಘದ ನಡೆ, ಶಾಲೆಯ ಕಡೆಗೆ’, ಸರ್ಕಾರಿ ಶಾಲೆಗಳಿಗೆ ಸ್ಪರ್ಧಾತ್ಮಕ ಡೈಜಿಸ್ಟ್ ವಿತರಣೆ ಹಾಗೂ ಪ್ರವೇಶ ಪರೀಕ್ಷೆಗೆ ಉಚಿತ ತರಬೇತಿ ನೀಡುವ ಮೂಲಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ವಿಶಿಷ್ಟ ರೀತಿಯಲ್ಲಿ ಕೆಲಸ ಮಾಡುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.
ಜಿಲ್ಲಾ ಪಂಚಾಯತಿ, ಶಾಲಾ ಶಿಕ್ಷಣ ಇಲಾಖೆ ಕೊಪ್ಪಳ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ ಗಂಗಾವತಿ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಸಹಯೋಗದಲ್ಲಿ ಶನಿವಾರ ಇಲ್ಲಿನ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಶೈಕ್ಷಣಿಕ ಕಾರ್ಯಾಗಾರ, ಎನ್‌ಎಂಎಂಎಸ್ , ನವೋದಯ, ಮೊರಾರ್ಜಿ ದೇಸಾಯಿ ಇತರೆ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಯ ಉಚಿತ ತರಬೇತಿ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರದ ಜತೆಗೆ ಸಂಘ-ಸಂಸ್ಥೆಗಳು ಕೈ ಜೋಡಿಸಿದಾಗ ಮಾತ್ರ ಸರ್ಕಾರಿ ಶಾಲೆಗಳು ಮತ್ತಷ್ಟು ಸಬಲೀಕರಣಗೊಳ್ಳುತ್ತವೆ ಎಂದು ತಿಳಿಸಿದರು. ಕ್ಷೇತ್ರದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಹತ್ತಾರು ಮೊರಾರ್ಜಿ ದೇಸಾಯಿ ಶಾಲೆ ಹಾಗೂ ವಸತಿ ನಿಲಯ ಸ್ಥಾಪಿಸಲು ಯೋಜಿಸಲಾಗಿದೆ. ಈಗಾಗಲೆ ಪಟ್ಟಣಕ್ಕೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಸತಿ ನಿಲಯ ಸ್ಥಾಪಿಸಲಾಗುತ್ತಿದೆ.
ನವಲಿ ಗ್ರಾಮಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರು ಆಗಿದ್ದು, 22 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಶ್ರೀರಾಮನಗರಕ್ಕೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯ ಮಂಜೂರಿಯಾಗಿದೆ ಎಂದು ತಿಳಿಸಿದರು.







