ಯುವಶಕ್ತಿ ದೇಶದ ಅಮೂಲ್ಯ ಸಂಪತ್ತು: ಸಚಿವ ಝಮೀರ್ ಅಹ್ಮದ್

ಬೆಂಗಳೂರು : ಯುವಶಕ್ತಿ ದೇಶದ ಅಮೂಲ್ಯ ಸಂಪತ್ತಾಗಿದ್ದು, ಅದನ್ನು ಮಾದಕ ವಸ್ತುಗಳಂತಹ ದುಶ್ಚಟಗಳಿಂದ ದೂರವಿಟ್ಟು ದೇಶ ಹಾಗೂ ಸಮಾಜದ ಪ್ರಗತಿಗೆ ಬಳಸಿಕೊಳ್ಳಬೇಕು ಎಂದು ವಸತಿ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಬುಧವಾರ ನಗರದ ಮೈಸೂರು ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಕರ್ನಾಟಕ ಹ್ಯೂಮ್ಯಾನಿಟಿ ವೆಲ್ಫೇರ್ ಟ್ರಸ್ಟ್ ವತಿಯಿಂದ ಸೆಂಟ್ರಲ್ ಮುಸ್ಲಿಮ್ ಅಸೋಸಿಯೇಷನ್ ಹಾಗೂ ಮುಹಮ್ಮದೀಯ ಟ್ರಸ್ಟ್ ಸಹಯೋಗದಲ್ಲಿ ‘ಡ್ರಗ್ಸ್ ವಿರುದ್ಧ ಅಭಿಯಾನ’ದ ಅಂಗವಾಗಿ ಆಯೋಜಿಸಿದ್ದ ಕ್ರೀಡಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಯುವಜನತೆ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಡ್ರಗ್ಸ್ ವ್ಯಸನವು ವ್ಯಕ್ತಿಯ ಆರೋಗ್ಯ, ಶಿಕ್ಷಣ, ಉದ್ಯೋಗ ಹಾಗೂ ಕುಟುಂಬ ಜೀವನದ ಮೇಲೆ ಗಂಭೀರ ಪರಿಣಾಮ ಬೀರುವುದಲ್ಲದೆ, ಸಮಾಜದ ಸ್ವಾಸ್ಥ?ಯಕ್ಕೂ ಧಕ್ಕೆ ಉಂಟುಮಾಡುತ್ತದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಹ್ಯೂಮಾನಿಟಿ ವೆಲ್ಫೇರ್ ಟ್ರಸ್ಟ್ ಸಂಸ್ಥಾಪಕ ಹಾಗೂ ಕೆಎಂಡಿಸಿ ಅಧ್ಯಕ್ಷ ಬಿ.ಕೆ.ಅಲ್ತಾಫ್ ಖಾನ್ ಮಾತನಾಡಿದರು. ನೂರಾರು ಯುವಕರು, ಶಾಲಾ ವಿದ್ಯಾರ್ಥಿಗಳಿಗೆ ಕ್ರೀಡಾ ಕಿಟ್‌ಗಳನ್ನು ವಿತರಿಸಲಾಯಿತು. ರಾಜ್ಯ ಸರಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಇಸ್ಮಾಯಿಲ್ ಝಬೀವುಲ್ಲಾ, ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ಮೋಮಿನ್‌ಪುರ ಮುಹಮ್ಮದೀಯ ಮಸೀದಿ ಅಧ್ಯಕ್ಷ ಕಲೀಂ ಉಲ್ಲಾ, ಚಂದ್ರಶೇಖರ್, ಡಿ.ಸಿ.ರಮೇಶ್, ಗೋವಿಂದರಾಜು, ಅತುಶ್, ರವಿಪ್ರಸಾದ್ ಇತರರು ಉಪಸ್ಥಿತರಿದ್ದರು.






