ಕರ್ನಾಟಕ ಅಲ್ಪಸಂಖ್ಯಾತ ಶಾಸಕರ ವೇದಿಕೆ ಅಧ್ಯಕ್ಷರಾಗಿ ಎನ್.ಎ.ಹ್ಯಾರಿಸ್ ಆಯ್ಕೆ

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತ ಶಾಸಕರ ವೇದಿಕೆಯ ಅಧ್ಯಕ್ಷರಾಗಿ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎನ್.ಎ.ಹ್ಯಾರಿಸ್ ಅವರು ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಚಿವ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ನಡೆದ ಕರ್ನಾಟಕ ಅಲ್ಪಸಂಖ್ಯಾತ ಶಾಸಕರ ವೇದಿಕೆಯ ಸಭೆಯಲ್ಲಿ ಎನ್.ಎ. ಹ್ಯಾರಿಸ್ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.
ವೇದಿಕೆಯ ಪ್ರಧಾನ ಕಾರ್ಯದರ್ಶಿಯಾಗಿ ಶಾಸಕ ಯಾಸಿರ್ ಪಠಾಣ್ ಹಾಗೂ ಜಂಟಿ ಕಾರ್ಯದರ್ಶಿಯಾಗಿ ಬಲ್ಕಿಸ್ ಬಾನು ಅವರನ್ನು ಆಯ್ಕೆ ಮಾಡಲಾಗಿದೆ.
ಅಲ್ಪಸಂಖ್ಯಾತ ಸಮುದಾಯದ ಜನಪ್ರತಿನಿಧಿಗಳನ್ನು ಒಗ್ಗೂಡಿಸಿ, ಸಮುದಾಯದ ಪ್ರಮುಖ ಸಮಸ್ಯೆಗಳು, ಅಭಿವೃದ್ಧಿ, ಶಿಕ್ಷಣ, ಉದ್ಯೋಗ ಹಾಗೂ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ಸಂಬಂಧಿಸಿದ ವಿಚಾರಗಳನ್ನು ಪರಿಣಾಮಕಾರಿಯಾಗಿ ಸರಕಾರದ ಗಮನಕ್ಕೆ ತರುವ ನಿಟ್ಟಿನಲ್ಲಿ ವೇದಿಕೆ ಕಾರ್ಯನಿರ್ವಹಿಸಲಿದೆ.
ಸಭೆಯಲ್ಲಿ ರಾಜ್ಯಸಭಾ ಸದಸ್ಯರಾದ ಮನ್ಸೂರ್ ಅಲಿ ಖಾನ್, ಸಚಿವರಾದ ರಿಝ್ವಾನ್ ಅರ್ಷದ್, ಶಾಸಕರಾದ ರಹೀಮ್ ಖಾನ್, ಇಕ್ಬಾಲ್ ಹುಸೇನ್ ಸೇರಿದಂತೆ ಹಲವು ಶಾಸಕರು ಹಾಗೂ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.
ವೇದಿಕೆಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎನ್.ಎ. ಹ್ಯಾರಿಸ್ ಅವರಿಗೆ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು.
ಕರ್ನಾಟಕ ಅಲ್ಪಸಂಖ್ಯಾತ ಶಾಸಕರ ವೇದಿಕೆಯ ಅಧ್ಯಕ್ಷನನ್ನಾಗಿ ನನ್ನನ್ನು ಆಯ್ಕೆ ಮಾಡಿರುವುದು ನನಗೆ ದೊರೆತಿರುವ ಗೌರವದ ಜೊತೆಗೆ ಮಹತ್ವದ ಜವಾಬ್ದಾರಿಯೂ ಆಗಿದೆ. ಸಮುದಾಯದ ಸಮಸ್ಯೆಗಳು, ಹಕ್ಕುಗಳು ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳನ್ನು ಪರಿಣಾಮಕಾರಿಯಾಗಿ ಸರಕಾರದ ಗಮನಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಎಲ್ಲರನ್ನು ಒಳಗೊಂಡ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಸರ್ವತೋಮುಖ ಅಭಿವೃದ್ಧಿಗೆ ವೇದಿಕೆಯ ಮೂಲಕ ಧ್ವನಿಯಾಗುತ್ತೇನೆ. ನನ್ನ ಮೇಲೆ ವಿಶ್ವಾಸವಿಟ್ಟು ಈ ಜವಾಬ್ದಾರಿ ನೀಡಿದ ಎಲ್ಲ ಶಾಸಕರು ಹಾಗೂ ಹಿರಿಯ ನಾಯಕರಿಗೆ ಹೃತ್ಪೂರ್ವಕ ಧನ್ಯವಾದಗಳು.
-ಎನ್.ಎ.ಹ್ಯಾರಿಸ್, ಶಾಸಕರು






