ಪುತ್ತೂರು ತಾಲೂಕಿನಲ್ಲಿ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಾರಂಭವಿಲ್ಲ: ಸಚಿವ ಜಿ.ಪರಮೇಶ್ವರ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಪೊಲೀಸ್ ಅಧೀಕ್ಷಕರ ಕಚೇರಿಯನ್ನು ಪ್ರಾರಂಭಿಸುವ ಕುರಿತು ಯಾವುದೆ ಪ್ರಸ್ತಾವ ಸರಕಾರದ ಪರಿಶೀಲನೆಯಲ್ಲಿ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಅಶೋಕ್ ಕುಮಾರ್ ರೈ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಹಿತದೃಷ್ಟಿಯಿಂದ ಪುತ್ತೂರಿನಲ್ಲಿ ಈಗಾಗಲೇ ಸಹಾಯಕ ಪೊಲೀಸ್ ಅಧೀಕ್ಷಕರ ಕಚೇರಿಯು ಕಾರ್ಯನಿರ್ವಹಿಸುತ್ತಿದೆ ಎಂದರು.
ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪಂಚಾಯತ್ ಕಚೇರಿ, ಹಿಂದುಳಿದ ವರ್ಗಗಳ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಇತ್ಯಾದಿ ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಕಚೇರಿಗಳು ಮಂಗಳೂರಿನಲ್ಲಿಯೆ ಕಾರ್ಯ ನಿರ್ವಹಿಸುತ್ತಿರುವುದರಿಂದ ಜಿಲ್ಲಾ ಪೊಲೀಸ್ ಕಚೇರಿಗೆ ಬರುವಂತಹ ಸಾರ್ವಜನಿಕರು ಈ ಕಚೇರಿಗಳಿಗೂ ತೆರಳಿ ತಮ್ಮ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಹೋಗುತ್ತಿದ್ದಾರೆ ಎಂದು ಪರಮೇಶ್ವರ್ ಹೇಳಿದರು.
ಅಲ್ಲದೆ, ತುರ್ತು ಸಂದರ್ಭದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಆಡಳಿತಾತ್ಮಕ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲು ಅನುಕೂಲವಾಗಿದೆ. ಆದುದರಿಂದ, ಪೊಲೀಸ್ ಅಧೀಕ್ಷಕರ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವ ಪ್ರಶ್ನೆಯೆ ಉದ್ಭವಿಸುವುದಿಲ್ಲ ಎಂದು ಅವರು ತಿಳಿಸಿದರು.







