ಉತ್ತರ ಕರ್ನಾಟಕದ ಜಿಲ್ಲೆಗಳ ನದಿಗೆ ನೀರು ಹರಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿಗೆ ಪತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಮಹಾರಾಷ್ಟ್ರದ ಜಲಾಶಯ ನೀರು ಹರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾರಾಷ್ಟ್ರ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗುರುವಾರ ಪ್ರಕಟನೆ ಹೊರಡಿಸಿರುವ ಅವರು, ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಯು ತೀವ್ರವಾದ ಬರವನ್ನು ಎದುರಿಸುತ್ತಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಹಾಗೂ ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಲಾಗಿತ್ತು ಎಂದಿದ್ದಾರೆ.
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯ ಅಭಾವದಿಂದಾಗಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದು, ಈಗಿರುವ ನೀರಿನ ಪ್ರಮಾಣದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ಹಾಗೂ ಉಜನಿ ಜಲಾಶಯದಿಂದ ಭೀಮಾ ನದಿಗೆ 1 ಟಿಎಂಸಿ ನೀರು ಹರಿಸುವಂತೆ ಪತ್ರದಲ್ಲಿ ತಿಳಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
ಮುಖ್ಯಮಂತ್ರಿಗಳು ಬರೆದ ಪತ್ರಕ್ಕೆ ಸ್ಪಂದನೆ ಸಿಗದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮಹಾರಾಷ್ಟ್ರದ ಅಧಿಕಾರಿಗಳ ಮೇಲೆ ನಿರಂತರ ಒತ್ತಡ ತರಲಾಗುತ್ತಿದೆ. ಕಲಬುರಗಿ ಜಿಲ್ಲೆ ಹಾಗೂ ಈಗ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಅಫಜಲಪುರ ತಾಲೂಕಿನಲ್ಲಿನ ಸಮಸ್ಯೆ ಬಗೆಹರಿಸಲು ಭೀಮಾ ನದಿಗೆ ನೀರು ಹರಿಸಲು ಪ್ರಯತ್ನ ನಡೆದಿದೆ. ಈ ನಡುವೆ, ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯದಿಂದ ಸೋನ್ನ ಬ್ಯಾರೆಜಿಗೆ ನೀರು ತರುವ ಪ್ರಯತ್ನವೂ ನಡೆದಿದೆ ಎಂದು ಪ್ರಿಯಾಂಕ್ ಖರ್ಗೆ ವಿವರಿಸಿದ್ದಾರೆ.
ಕುಡಿಯುವ ನೀರಿಗಾಗಿ ಹಣದ ಕೊರತೆ ಇಲ್ಲ. ಪಿ.ಡಿ. ಖಾತೆಯಲ್ಲಿ ರೂ 16 ಕೋಟಿ ಹಾಗೂ ಗ್ರಾಮೀಣ ಕುಡಿಯುವ ನೀರು ವಿಭಾಗದ ಖಾತೆಯಲ್ಲಿ ರೂ 127 ಕೋಟಿ ಅನುದಾನ ಲಭ್ಯವಿದೆ. ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಬಾಡಿಗೆ ಬೋರ್ ವೆಲ್ ಹಾಗೂ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.