ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಷರತ್ತು ಸಡಿಲಿಸಲು ಪ್ರಸ್ತಾವನೆ ಸಲ್ಲಿಕೆ
ಬೆಂಗಳೂರು: ಧಾರ್ಮಿಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ವಿಧಿಸಿರುವ ಮಾನದಂಡವನ್ನೇ ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ನೇತೃತ್ವದ ನಿಯೋಗ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ಅವರಿಗೆ ಮನವಿ ಸಲ್ಲಿಸಿದೆ.
ಶನಿವಾರ ವಿಕಾಸಸೌಧದಲ್ಲಿ ಈ ಕುರಿತು ಸಚಿವರನ್ನು ಭೇಟಿ ಮಾಡಿದ ನಿಯೋಗ, ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆಯಾ ಮತೀಯ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ನೀಡಬೇಕು ಎಂಬುದು ಸೇರಿದಂತೆ ಹಲವು ಷರತ್ತು ಇದ್ದು, ಇದರಿಂದ ಸಮಸ್ಯೆ ಆಗುತ್ತಿದೆ. ಷರತ್ತು ಸಡಿಲಿಸಿ ಭಾಷಾ ಮತ್ತು ಮತೀಯ ಅಲ್ಪಸಂಖ್ಯಾತರಿಗೆ ಸಂವಿಧಾನದ ಮೂಲಭೂತ ಹಕ್ಕುಗಳನುಸಾರ ಸರಿ ಸಮನಾದ ನ್ಯಾಯ ಒದಗಿಸಬೇಕು ಎಂದು ಪ್ರಸ್ತಾವನೆ ಸಲ್ಲಿಸಿದರು.
ಭಾಷಾ ಮತ್ತು ಧಾರ್ಮಿಕ ಅಲ್ಪಸಂಖ್ಯಾತರಿಗೆ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಭಾಷೆ ಮತ್ತು ಧರ್ಮ ಪೋಷಿಸಿ ಬೆಳೆಸಿಕೊಂಡು ಹೋಗಲು ವಿಶೇಷ ಸ್ಥಾನ ಮಾನ ಸಮಾನವಾಗಿ ಕಲ್ಪಿಸಲಾಗಿದ್ದು, ಧಾರ್ಮಿಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ವಿಧಿಸಿರುವ ಷರತ್ತು ಮಾನದಂಡ ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸಿ ಆದೇಶ ಹೊರಡಿಸಬೇಕಿದೆ ಎಂದು ನಿಯೋಗ ಪ್ರತಿಪಾದಿಸಿತು.
ಈ ಕುರಿತು ಸಾಧಕ-ಬಾಧಕ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಸಚಿವ ಝಮೀರ್ ಅಹ್ಮದ್ ಖಾನ್, ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್ ಹಾಗೂ ಇತರೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.