ವಾಲ್ಮೀಕಿ ಹಗರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣ : ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣವನ್ನು ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಗೆ ವಹಿಸಬೇಕು ಎಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗರಪ್ರಸನ್ನ ಅವರಿದ್ದ ನ್ಯಾಯಪೀಠ ತೀರ್ಪು ಕಾಯ್ದಿರಿಸಿದ್ದು, ಅ.14 ಇಲ್ಲವೇ 15ರಂದು ತೀರ್ಪು ಪ್ರಕಟಿಸುವುದಾಗಿ ಪೀಠ ತಿಳಿಸಿದೆ.
ಅರ್ಜಿಯ ವಿಚಾರಣೆ ವೇಳೆ ರಾಜ್ಯ ಸರಕಾರದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಬಿ.ವಿ.ಆಚಾರ್ಯ, "ಪ್ರಕರಣ ರಾಜ್ಯ ಸರಕಾರದ ವ್ಯಾಪ್ತಿಗೆ ಸೇರಿರುವುದಾಗಿದ್ದು, ರಾಜ್ಯ ಪೊಲೀಸರು ಈ ಪ್ರಕರಣ ಸಂಬಂಧ ತನಿಖೆ ನಡೆಸುವುದಕ್ಕೆ ಸಂಪೂರ್ಣ ಅಧಿಕಾರವಿದೆ. ರಾಜ್ಯ ಸರಕಾರ ತನಿಖೆ ನಡೆಸುತ್ತಿರುವ ಸಂದರ್ಭದಲ್ಲಿ ಕೇಂದ್ರ ಸರಕಾರ ತನಿಖೆ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದಕ್ಕೆ ಅಧಿಕಾರವಿಲ್ಲ. ಬ್ಯಾಂಕ್‌ನ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸುತ್ತಿರುವ ರಾಜ್ಯ ಸರಕಾರವನ್ನೇ ಆರೋಪಿಯನ್ನಾಗಿಸಲಾಗುತ್ತಿದೆ" ಎಂದು ಅವರು ಪೀಠಕ್ಕೆ ವಿವರಿಸಿದರು.