ಸರಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧಿ ಕೇಂದ್ರಗಳ ಹಂಚಿಕೆ ಸ್ಥಗಿತ : ಸರಕಾರ ಆದೇಶ

ಬೆಂಗಳೂರು : ಸರಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಜನೌಷಧಿ ಕೇಂದ್ರಗಳ ಹಂಚಿಕೆಯನ್ನು ಸ್ಥಗಿತಗೊಳಿಸಲು ಮತ್ತು ಅದಕ್ಕೆ ಅನುಗುಣವಾಗಿ ಜನೌಷಧಿ ಕೇಂದ್ರಗಳ ಪ್ರಾರಂಭಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತಾಲಯದಲ್ಲಿ ಅನುಮೋದನೆಗಾಗಿ ಬಾಕಿ ಇರುವ 31 ಅರ್ಜಿಗಳನ್ನು ತಿರಸ್ಕರಿಸಲು ಅನುಮೋದನೆ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಸರಕಾರಿ ಆಸ್ಪತ್ರೆಗಳ ಹೊರಗೆ ಜನೌಷಧಿ ಕೇಂದ್ರಗಳ ಸ್ಥಾಪನೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬಾರದ ಕಾರಣ ಅವು ಮುಂದುವರೆಯ ಬಹುದಾಗಿದೆ. ಆರೋಗ್ಯ ಇಲಾಖೆಯ ಸರಕಾರಿ ಆಸ್ಪತ್ರೆಗಳಲ್ಲಿ ಅಸ್ತಿತ್ವದಲ್ಲಿರುವ ಜನೌಷಧಿ ಕೇಂದ್ರಗಳನ್ನು ಅವರೊಂದಿಗೆ ಮಾಡಿಕೊಂಡಿರುವ ಒಪ್ಪಂದ ನಿಯಮಗಳ ಪ್ರಕಾರ ಸ್ಥಗಿತಗೊಳಿಸಲು ಅಗತ್ಯ ಕ್ರಮ ವಹಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಹಾಗೆಯೇ, ಜೆನೆರಿಕ್ ಔಷಧಿಗಳ ಖರೀದಿಗೆ ಬಿಪಿಪಿಐಯೊಂದಿಗೆ ಕೆಎಸ್‍ಎಂಎಸ್‍ಸಿಎಲ್ ರವರು ವಿಶೇಷ ದರಗಳನ್ನು ರೂಪಿಸಲು ಸೂಚಿಸಿದೆ. ಪರ್ಯಾಯವಾಗಿ ಆಸ್ಪತ್ರೆಗಳು ಬಿಪಿಪಿಐ ಯಿಂದ ಔಷಧಿಗಳನ್ನು ಖರೀದಿಸಿ ರೋಗಿಗಳಿಗೆ ಉಚಿತವಾಗಿ ವಿತರಿಸಲು ಕ್ರಮ ವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಶ್ರೀಪತಿ ಪಿ.ಕೆ. ಆದೇಶದಲ್ಲಿ ತಿಳಿಸಿದ್ದಾರೆ.
ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ರೋಗಿಗಳಿಗೆ ಯಾವುದೇ ಔಷಧಿಗಳನ್ನು ಹೊರಗಿನಿಂದ ಖರೀದಿಸಲು ಶಿಫಾರಸ್ಸು ಮಾಡದಂತೆ ನೋಡಿಕೊಳ್ಳುವುದು ಸರಕಾರದ ನೀತಿಯಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ಆವರಣದೊಳಗೆ ಜನೌಷಧಿ ಕೇಂದ್ರಗಳನ್ನು ತೆರೆಯುವುದು ಸರಕಾರದ ನೀತಿಗೆ ವ್ಯತಿರಿಕ್ತವಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಸಲ್ಲಿಸಿರುವ ಪ್ರಸ್ತಾವನೆ ಮತ್ತು ಲಭ್ಯವಿರುವ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸರಕಾರವು ಈ ಆದೇಶವನ್ನು ಹೊರಡಿಸಿದೆ.







