ನಿವೃತ್ತ ನ್ಯಾಯಮೂರ್ತಿ ಎಸ್.ಆರ್. ನಾಯಕ್ ನಿಧನ

ಎಸ್.ಆರ್. ನಾಯಕ್
ಬೆಂಗಳೂರು : ನಿವೃತ್ತ ನ್ಯಾಯಮೂರ್ತಿ ಎಸ್.ಆರ್. ನಾಯಕ್(80) ರವಿವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಎಸ್.ಆರ್.ನಾಯಕ್ ಅವರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಸಂಖ್ಯೆಯ ಬಂಧು-ಮಿತ್ರರರು ಹಾಗೂ ಒಡನಾಡಿಗಳನ್ನು ಅಗಲಿದ್ದಾರೆ. ಛತ್ತೀಸ್ಗಢದ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.
ನಾಳೆ(ಮೇ 19) ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ನಗರದ ಆರ್ಎಂವಿ ಎರಡನೆ ಹಂತದಲ್ಲಿರುವ ಸ್ವಗೃಹದಲ್ಲಿ ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಸಂಜೆ 4 ಗಂಟೆಗೆ ಇಲ್ಲಿನ ಹೆಬ್ಬಾಳದ ಚಿತಾಗಾರದಲ್ಲಿ ಅವರ ಅಂತ್ಯ ಸಂಸ್ಕಾರವನ್ನು ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಎಸ್.ಆರ್. ನಾಯಕ್ ಅವರು 1944ರಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಜನಿಸಿದರು. ಅವರ ಪೂರ್ಣ ಹೆಸರು ಸುಬ್ರಾಯ್ ರಾಮ ನಾಯಕ್ ಆಗಿದ್ದು, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಪ್ರಥಮ ಅಧ್ಯಕ್ಷರಾಗಿದ್ದರು. ಹಾಗೆಯೇ ಅವರು ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಎಸ್.ಆರ್. ನಾಯಕ್ ಅವರ ಸೇವೆಯನ್ನು ಪರಿಗಣಿಸಿ, ಹಂಪಿಯ ಕನ್ನಡ ವಿಶ್ವ ವಿದ್ಯಾಲಯವು ಅವರಿಗೆ ನಾಡೋಜ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.





