ನಾಳೆ ಹೊಸದಿಲ್ಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಆರ್ಸಿಬಿ ತಂಡದ ವಿಜಯೋತ್ಸವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣದ ಹಿನ್ನೆಲೆಯಲ್ಲಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೆ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಹೊಸದಿಲ್ಲಿಗೆ ಬರುವಂತೆ ಬುಲಾವ್ ನೀಡಿದೆ.
ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 7 ಗಂಟೆಗೆ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊಸದಿಲ್ಲಿಗೆ ತೆರಳಲಿರುವ ಮುಖ್ಯಮಂತ್ರಿ, ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ಭೇಟಿ ಮಾಡಲು ಸಮಯ ಕೋರಿದ್ದಾರೆ.
ಜೊತೆಗೆ, ವಿಧಾನ ಪರಿಷತ್ತಿಗೆ ನಾಲ್ವರು ಸದಸ್ಯರನ್ನು ನಾಮ ನಿರ್ದೇಶನ ಮಾಡುವ ಸಂಬಂಧ ಎನ್ಆರ್ಐ ಫೋರಂ ಕರ್ನಾಟಕದ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ದಲಿತ ಮುಖಂಡ ಡಿ.ಜಿ.ಸಾಗರ್ ಹಾಗೂ ಹಿರಿಯ ಪತ್ರಕರ್ತ ದಿನೇಶ್ ಅಮಿನಮಟ್ಟು ಹೆಸರನ್ನು ಶಿಫಾರಸು ಮಾಡಲು ಸಿದ್ದರಾಮಯ್ಯ ಮುಂದಾಗಿದ್ದರು.
ಆದರೆ, ಸಂಭಾವ್ಯ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ಹೈಕಮಾಂಡ್ ತಡೆ ನೀಡಿದ್ದರು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿಯನ್ನು ಹೊಸದಿಲ್ಲಿಗೆ ಬರುವಂತೆ ಆಹ್ವಾನಿಸಿದೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಜೊತೆ ಮುಖ್ಯಮಂತ್ರಿ ಚರ್ಚೆ ನಡೆಸಿದ ಬಳಿಕ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ತಿಳಿದು ಬಂದಿದೆ.
ಇದೇ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರದ ವಿರುದ್ಧ ಕೇಳಿ ಬರುತ್ತಿರುವ ಆರೋಪಗಳು, ಟೀಕೆಗಳ ಬಗ್ಗೆಯೂ ಕಾಂಗ್ರೆಸ್ ಹೈಕಮಾಂಡ್ಗೆ ಮುಖ್ಯಮಂತ್ರಿ ವಿವರಣೆ ನೀಡಲಿದ್ದಾರೆ ಎಂದು ಹೇಳಲಾಗಿದೆ.
ಈ ಮಧ್ಯೆ ಸಂಪುಟ ವಿಸ್ತರಣೆ ಕುರಿತು ಕಾಂಗ್ರೆಸ್ ವಲಯದಲ್ಲಿ ಚರ್ಚೆ ತೀವ್ರಗೊಂಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಜತೆ ಸಮಾಲೋಚನೆ ನಡೆಸಲಿರುವ ಸಿದ್ದರಾಮಯ್ಯ, ವರಿಷ್ಠರ ಸಲಹೆ-ಸೂಚನೆಗಳನ್ನು ಆಧರಿಸಿ ಮುಂದಿನ ತೀರ್ಮಾನಗಳನ್ನು ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಗೊತ್ತಾಗಿದೆ.