ʼದ್ವೇಷ ಭಾಷಣʼ ಕಾಟಾಚಾರದ ಎಫ್‌ಐಆರ್‌ನಿಂದ ಪ್ರಯೋಜನವಿಲ್ಲ : ಬಿ.ಕೆ.ಹರಿಪ್ರಸಾದ್

ಬೆಂಗಳೂರು: ದ್ವೇಷ ಭಾಷಣಕ್ಕೆ ಕಾಟಾಚಾರದ ಎಫ್‌ಐಆರ್‌ನಿಂದ ಪ್ರಯೋಜನವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ವೇಷ ಭಾಷಣ ಮಾಡಿದವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ನಿರ್ದೇಶನ ನೀಡಿದೆ. ಎಫ್‌ಐಆರ್ ಕಾಟಾಚಾರಕ್ಕೆ ಮಾಡುವುದಲ್ಲ. ಪ್ರಚೋದನಕಾರಿ ಭಾಷಣ ಮಾಡುವವರ ವಿರುದ್ಧ ಯಾವ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಬೇಕು ಎಂದು ನಮೂದಿಸಿ ಎಫ್‌ಐಆರ್ ಮಾಡಿದಾಗ ಮಾತ್ರ ಶಿಕ್ಷೆಯಾಗುತ್ತದೆ ಎಂದು ಹರಿಪ್ರಸಾದ್ ಹೇಳಿದರು.
ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಸೀಮಿತವಾಗಿ ರಚಿಸಲಾಗಿರುವ ಕೋಮು ನಿಗ್ರಹ ಪಡೆಗೆ ಸಂಪೂರ್ಣ ಶಕ್ತಿ ತುಂಬಿದರೆ ಪರಿಣಾಮಕಾರಿಯಾಗಿ ಕೆಲಸ ಆಗುತ್ತದೆ ಎಂದು ಅವರು ಹೇಳಿದರು.
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಧರಣಿ ನಡೆಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮುಂಬೈ, ಪುಣೆಯಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ಜನ ಸಾವನ್ನಪ್ಪಿದರು. ಅಹ್ಮದಾಬಾದ್ ವಿಮಾನ ದುರಂತದಲ್ಲಿ ನೂರಾರು ಮಂದಿ ಮೃತಪಟ್ಟರು. ಬಿಜೆಪಿಯವರು ಧರಣಿ ಮಾಡಬೇಕಾದರೆ ಕೇಂದ್ರ ಸಚಿವ ಅಮಿತ್ ಶಾ ಅವರ ಪುತ್ರ ಬಿಸಿಸಿಐ ಅಧ್ಯಕ್ಷನ ಮನೆ ಮುಂದೆ ಧರಣಿ ಮಾಡಲಿ. ಕಾಲ್ತುಳಿತದಲ್ಲಿ ಮೃತಪಟ್ಟಿರುವ ಕುಟುಂಬಗಳಿಗೆ ತಲಾ ಐದು ಕೋಟಿ ರೂ.ಪರಿಹಾರ ನೀಡಲಿ ಎಂದು ಅವರು ಒತ್ತಾಯಿಸಿದರು.







