ಐಪಿಎಸ್ ಅಧಿಕಾರಿ ಅಮಾನತು ಆದೇಶ ವಿಚಾರ | ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದೇವೆ: ಡಾ.ಜಿ.ಪರಮೇಶ್ವರ್

ಬೆಂಗಳೂರು, ಜು.2: ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ಆದೇಶ ಸಂಬಂಧ ಸಿಎಟಿ ಆದೇಶ ಪ್ರಶ್ನಿಸಿ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಸರಕಾರದ ಅಮಾನತು ಆದೇಶ ಸರಿ ಇದೆ ಎನ್ನುವುದು ನಮ್ಮ ವಾದ, ಹೀಗಾಗಿ, ಸಿಎಟಿ ಆದೇಶ ಪ್ರಶ್ನಿಸಿ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದರು.
ಬಳ್ಳಾರಿ ಜೈಲಿನಲ್ಲಿ ಕೈದಿಗಳ ಗದ್ದಲ, ಫೋಟೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಮತ್ತೆ ಆ ರೀತಿ ಆಗದಂತೆ ಎಚ್ಚರಿಕೆ ವಹಿಸಲು ತಿಳಿಸಲಾಗಿದೆ ಎಂದು ಅವರು ಹೇಳಿದರು.
ಸುರ್ಜೇವಾಲ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಸುರ್ಜೇವಾಲಾ ಅವರು ನಿನ್ನೆ ಬರುವುದಕ್ಕೆ ಹೇಳಿದ್ದರು. ಆದರೆ, ನನಗೆ ನಿನ್ನೆ ಭೇಟಿ ಮಾಡಲು ಆಗಲಿಲ್ಲ. ಅದಕ್ಕಾಗಿ ಇವತ್ತು ಬುಧವಾರ ಸಂಜೆ ಭೇಟಿ ಮಾಡಿ ಚರ್ಚೆ ನಡೆಸುತ್ತೇವೆ ಎಂದು ಅವರು ತಿಳಿಸಿದರು.
ವಾಲ್ಮೀಕಿ ನಿಗಮದ ಅಕ್ರಮದ ಬಗ್ಗೆ ಸಿಬಿಐ ತನಿಖೆ ವಿಚಾರವಾಗಿ ಪ್ರತಿಕ್ರಿಯಿಸಿ, ಯಾವುದೇ ಸಂಸ್ಥೆಯಿಂದ ತನಿಖೆ ಆಗಲಿ. ಅದಕ್ಕೆ ನಮ್ಮ ತಕರಾರು ಇಲ್ಲ ಎಂದು ಅವರು ಉಲ್ಲೇಖಿಸಿದರು.





