ದೇವನಹಳ್ಳಿ ರೈತರಿಗೆ ಹೊಸ ಕಾಯ್ದೆಯನ್ವಯ ಸೂಕ್ತ ಪರಿಹಾರ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ನಿರ್ಮಾಣದ ಹಿನ್ನೆಲೆಯಲ್ಲಿ ಭೂಮಿ ಕಳೆದುಕೊಳ್ಳಲಿರುವ ರೈತರಿಗೆ ಹೊಸ ಕಾಯ್ದೆಯನ್ವಯ ಸೂಕ್ತ ಪರಿಹಾರ ಕೊಡಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಣೆ ನೀಡಿದ್ದಾರೆ.
ಗುರುವಾರ ಸದಾಶಿವನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚನ್ನರಾಯಪಟ್ಟಣದ 10 ಗ್ರಾಮಗಳ ವ್ಯಾಪ್ತಿಗೆ ಸೇರಿರುವ 1,282 ಎಕರೆ ಭೂಮಿ ಮೇಲ್ಕಂಡ ಕೈಗಾರಿಕೆ ಸ್ಥಾಪನೆಗೆ ಅಗತ್ಯವಿದೆ. ಆದರೆ, ರೈತರು ಇದಕ್ಕೆ ವಿರೋಧ ವ್ಯಕ್ತಪಡಿಸಿ ಹೋರಾಡುತ್ತಿದ್ದಾರೆ. ಈ ಸಂಬಂಧ ನಾಳೆ (ಜು.4) ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ರೈತರ ಸಭೆ ಏರ್ಪಡಿಸಲಾಗಿದೆ ಎಂದರು.
ಕೈಗಾರಿಕೆಗಳಿಗೆ ಜಮೀನು ಬೇಕಾಗುತ್ತದೆ. ಭೂಮಿ ಕಳೆದುಕೊಳ್ಳಲಿರುವ ರೈತರಿಗೆ ಹೊಸ ಕಾಯ್ದೆಯನ್ವಯ ಸೂಕ್ತ ಪರಿಹಾರ ಕೊಡಲಾಗುವುದು. ಕೈಗಾರಿಕಾ ರಂಗದಲ್ಲಿ ತಮಿಳುನಾಡು, ಗುಜರಾತ್, ಒಡಿಶಾ, ಅಸ್ಸಾಂ ಮತ್ತಿತರ ರಾಜ್ಯಗಳಿಂದ ನಮಗೆ ತೀವ್ರ ಸ್ಪರ್ಧೆ ಇದೆ ಎಂದು ಎಂ.ಬಿ.ಪಾಟೀಲ್ ಮಾಹಿತಿ ನೀಡಿದರು.
ತಮಿಳುನಾಡು, ಗುಜರಾತ್, ಒಡಿಶಾ, ಅಸ್ಸಾಂ ರಾಜ್ಯಗಳಲ್ಲಿ ಉದ್ಯಮಿಗಳಿಗೆ ಏನೇನು ಸೌಲಭ್ಯ ಕೊಡಲಾಗುತ್ತಿದೆ, ಕೈಗಾರಿಕಾ ನೀತಿಗಳು ಹೇಗಿವೆ ಎನ್ನುವುದರ ಅರಿವು ನನಗಿದೆ. ಕೈಗಾರಿಕೆ ಮತ್ತು ಕೃಷಿ ಎರಡೂ ಮುಖ್ಯವಾಗಿದ್ದು, ಸರಿದೂಗಿಸಿಕೊಂಡು ಹೋಗುವ ಕೆಲಸ ಅಗತ್ಯವಾಗಿದೆ ಎಂದು ಅವರು ತಿಳಿಸಿದರು.







