‘ಸಾಹಿತ್ಯ ಸಮ್ಮೇಳನ ಅಧ್ಯಕ್ಷೆಯಾಗಿ ಬಾನು ಮುಷ್ತಾಕ್ ಆಯ್ಕೆ’; ಶ್ಲಾಘಿಸಿದ ರಾಜ್ಯ ಅಲ್ಪ ಸಂಖ್ಯಾತರ ಆಯೋಗ

ಬಾನು ಮುಷ್ತಾಕ್ Photo : AP
ಬೆಂಗಳೂರು: ಬಳ್ಳಾರಿಯಲ್ಲಿ ನಡೆಸಲು ತೀರ್ಮಾನಿಸಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೆಳನದ ಅಧ್ಯಕ್ಷರಾಗಿ ಬೂಕರ್ ಅಂತರ್ ರಾಷ್ಟ್ರೀಯ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರ ಆಯ್ಕೆಯನ್ನು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ಶ್ಲಾಘಿಸಿದೆ.
ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಶಿ ಅವರಿಗೆ ಪತ್ರ ಬರೆದಿರುವ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹ್ಮದ್ ಅವರು, ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಬೂಕರ್ ಪ್ರಶಸ್ತಿ ವಿಜೇತ ಹಿರಿಯ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿರುವ ತೀರ್ಮಾನವು ಐತಿಹಾಸಿಕ ಮತ್ತು ಶ್ಲಾಘನೀಯವಾಗಿದೆ ಎಂದು ತಿಳಿಸಿದ್ದಾರೆ.
ಕನ್ನಡ ನಾಡಿನ ಹಾಸನ ಜಿಲ್ಲೆಯ ಅಲ್ಪಸಂಖ್ಯಾತ ಮಹಿಳಾ ಸಾಹಿತಿ ರಚಿಸಿರುವ ‘ಹೃದಯ ದೀಪ’ ಕನ್ನಡದ ಕಥಾ ಸಂಕಲನಕ್ಕೆ ಪ್ರತಿಷ್ಠಿತ ಅಂತರ್ ರಾಷ್ಟ್ರೀಯ ಬೂಕರ್ ಪ್ರಶಸ್ತಿ ಲಭಿಸಿರುವುದು, ಕನ್ನಡ ಭಾಷೆಗೆ ಹೆಮ್ಮೆಯ ವಿಷಯವಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಕೈಗೊಂಡಿರುವ ತೀರ್ಮಾನವನ್ನು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗವು ಹೃತೂರ್ವಕವಾಗಿ ಅಭಿನಂದಿಸುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.