ಪ್ರಮಾಣಪತ್ರದಲ್ಲಿ ಸುಳ್ಳು ಮಾಹಿತಿಗಳನ್ನು ನೀಡಿರುವ ಆರೋಪ | ಜನಾರ್ದನ ರೆಡ್ಡಿ ಶಾಸಕ ಸ್ಥಾನ ರದ್ದು ಕೋರಿ ಅರ್ಜಿ

ಬೆಂಗಳೂರು : ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಸುಳ್ಳು ಮಾಹಿತಿಗಳನ್ನು ನೀಡಿರುವ ಹಿನ್ನೆಲೆಯಲ್ಲಿ ಜನಾದರ್ನ ರೆಡ್ಡಿ ಅವರ ಶಾಸಕ ಸ್ಥಾನವನ್ನು ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.
2023 ರವಿಧಾನಸಭೆ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜನಾರ್ದನ ರೆಡ್ಡಿ ಗೆಲುವನ್ನು ಸಾಧಿಸಿದ್ದರು. ಈ ವೇಳೆ ಚುನಾವಣೆ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಲಾಗಿದೆ ಎಂದು ಆರೋಪಿ ಆಂಧ್ರಪ್ರದೇಶದ ಅನಂತಪುರಂ ನಿವಾಸಿ ಟಪಾಲ್ ಶಾಮ್‌ಪ್ರಸಾದ್ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಯನ್ನು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿ, ಚುನಾವಣಾ ಆಯೋಗ, ರಾಜ್ಯ ಮುಖ್ಯ ಚುನಾವಣಾ ಆಯುಕ್ತರ ಕಚೇರಿ, ಗಂಗಾವತಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ, ಜನಾರ್ದನ ರೆಡ್ಡಿಗೆ ನೋಟಿಸ್ ಜಾರಿಗೊಳಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಲೀಲಾಧರ ಎಚ್.ಪಿ. ವಾದ ಮಂಡಿಸಿ, ಚುನಾವಣೆಯಲ್ಲಿ ಸ್ಪರ್ಧಿಸಲು ಜನಾರ್ದನ ರೆಡ್ಡಿ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣಪತ್ರ ಸುಳ್ಳು ಮಾಹಿತಿಗಳನ್ನು ನೀಡಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ 2023ರ ಮೇ ತಿಂಗಳಲ್ಲಿ ಎರಡು ಮನವಿಗಳನ್ನು ಸಲ್ಲಿಸಲಾಗಿದೆ. ಆದರೆ, ಈವರೆಗೆ ಯಾವುದೇ ಕ್ರಮ ಆಗಿಲ್ಲ.ಹೀಗಾಗಿ ಶಾಸಕ ಸ್ಥಾನ ರದ್ದುಗೊಳಿಸುವಂತೆ ಮನವಿ ಮಾಡಿದರು.







