ಬೆಂಗಳೂರಿನಲ್ಲಿ ದೇಶದ ಮೊದಲ ಕ್ವಾಂಟಮ್ ಕಂಪ್ಯೂಟರ್ ಸೇವೆ ಲಭ್ಯ : ಭೋಸರಾಜು

ಬೆಂಗಳೂರು : ‘ದೇಶದ ಮೊದಲ ಕ್ವಾಂಟಮ್ ಕಂಪ್ಯೂಟರ್ ಬೆಂಗಳೂರಿನಲ್ಲಿ ಈಗಾಗಲೇ ಸೇವೆಯನ್ನು ನೀಡುತ್ತಿದೆ. ಕರ್ನಾಟಕ ಕ್ವಾಂಟಮ್ ನಾವಿನ್ಯತೆಯಲ್ಲಿ ದೇಶವನ್ನು ಮುನ್ನಡೆಸುತ್ತಿರುವುದಲ್ಲದೇ, ಭಾರತದ ಕ್ವಾಂಟಮ್ ಅಭಿವೃದ್ದಿಯ ಕೇಂದ್ರ ಬಿಂದುವಾಗಿದೆ’ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ.
ನವೆಂಬರ್ ತಿಂಗಳಲಿನಲ್ಲಿ ಅಮರಾವತಿಯಲ್ಲಿ ದೇಶದ ಮೊದಲ ಕ್ವಾಂಟಮ್ ಕಂಪ್ಯೂಟರ್ ಕಾರ್ಯಾರಂಭ ಮಾಡಲಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಎಕ್ಸ್ ನಲ್ಲಿ ಹಾಕಿರುವ ಪೋಸ್ಟ್‌ಗೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕ ರಾಜ್ಯ ಅದರಲ್ಲೂ ಬೆಂಗಳೂರು ನಗರ ಭಾರತದ ಕ್ವಾಂಟಮ್ ಕ್ಷೇತ್ರದ ಕೇಂದ್ರಬಿಂದುವಾಗಿ ಈಗಾಗಲೇ ಸಾಕಷ್ಟು ಪ್ರಗತಿಯನ್ನು ಸಾಧಿಸಿದೆ. ಇದಕ್ಕೆ ಉತ್ತಮ ಉದಾಹರಣೆ ಕ್ಯೂಪೈ ಎಐ ಸಂಸ್ಥೆ ಬೆಂಗಳೂರು ನಗರದಲ್ಲಿ ದೇಶೀಯವಾಗಿ ನಿರ್ಮಿಸಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ 25 ಕ್ಯೂಬಿಟ್ ಕ್ವಾಂಟಮ್ ಕಂಪ್ಯೂಟರ್ ಇಂಡಸ್ ಉತ್ತಮ ಉದಾಹರಣೆ ಎಂದು ತಿಳಿಸಿದ್ದಾರೆ.
ದೇಶದಲ್ಲೇ ಪ್ರಪ್ರಥಮವಾಗಿ ವಿಶ್ವದ ಪ್ರತಿಷ್ಠಿತ ವೈಜ್ಞಾನಿಕ ಸಂಶೋಧನಾ ಸಂಸ್ಥೆಯಾಗಿರುವ ಐಐಎಸ್‍ಸಿಯಲ್ಲಿ ಕ್ವಾಂಟಮ್ ರಿಸರ್ಚ್ ಪಾರ್ಕನ್ನು ಸ್ಥಾಪಿಸಲಾಗಿದೆ. ಅದರ ಎರಡನೇ ಹಂತದ ಅಭಿವೃದ್ದಿಗಾಗಿ 48 ಕೋಟಿ ರೂಪಾಯಿಗಳನ್ನು ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಭೋಸರಾಜು ಹೇಳಿದ್ದಾರೆ.
ರಾಜ್ಯದಲ್ಲಿ ಕ್ವಾಂಟಮ್ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಈಗಾಗಲೇ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಜು.31 ಹಾಗೂ ಆ.1ರಂದು ದೇಶದಲ್ಲೆ ಮೊದಲ ಬಾರಿಗೆ ಬೆಂಗಳೂರು ನಗರದಲ್ಲಿ ಕ್ವಾಂಟಮ್ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ. ಈ ಸಮ್ಮೇಳನದಲ್ಲಿ ಕ್ವಾಂಟಮ್ ಕ್ಷೇತ್ರದಲ್ಲಿ ನೊಬೆಲ್ ಪ್ರಶಸ್ತಿ ಪುರಸ್ಕೃತರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯವನ್ನು ಕ್ವಾಂಟಮ್ ಜಾಗತಿಕ ಶಕ್ತಿ ಕೇಂದ್ರವನ್ನಾಗಿಸುವ ನಿಟ್ಟಿನಲ್ಲಿ ರೋಡ್ ಮ್ಯಾಪ್ ಸಿದ್ದಪಡಿಸಲಾಗುತ್ತಿದೆ. ಜು.31ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇದನ್ನು ಅನಾವರಣಗೊಳಿಸಲಿದ್ದಾರೆ. ಪ್ರಗತಿಯನ್ನು ಸಂಭ್ರಮಿಸುವಾಗ ನಾವು ಸತ್ಯ ಹಾಗೂ ಅಂಕಿಗಳಲ್ಲಿ ಪರಿಗಣಿಸುವ ಪರಿಪಾಠ ಬೆಳೆಸಿಕೊಳ್ಳುವ ಎಂದು ಭೋಸರಾಜು ಹೇಳಿದ್ದಾರೆ.







