‘ಬೈಕ್ ಟ್ಯಾಕ್ಸಿ’ಗೆ ನಿಷೇಧವಿಲ್ಲ; ಎಜಿ ಜೊತೆ ಚರ್ಚಿಸಿ ಅಂತಿಮ ನಿರ್ಧಾರ : ಸಚಿವ ಬೈರತಿ ಸುರೇಶ್

ಬೆಂಗಳೂರು : ಬೈಕ್ ಟ್ಯಾಕ್ಸಿ ಸಂಬಂಧ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು, ಈ ಆದೇಶವನ್ನು ಪಾಲನೆ ಮಾಡಬೇಕಾಗುತ್ತದೆ. ಆದಾಗ್ಯೂ ಈ ಕುರಿತು ರಾಜ್ಯದ ಅಡ್ವೋಕೇಟ್ ಜನರಲ್ ಅವರೊಂದಿಗೆ ಇನ್ನೊಮ್ಮೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ಅವರು ತಿಳಿಸಿದ್ದಾರೆ.
ಶನಿವಾರ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ವಿಚಾರದಲ್ಲಿ ಅನೇಕ ನಿಯಮಗಳನ್ನು ಹೇರುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದೇವೆ. ಈ ಸಂಬಂಧ ನಿಯಮಗಳನ್ನು ರೂಪಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಬೈಕ್ ಟ್ಯಾಕ್ಸಿಯಲ್ಲಿ ಪ್ರಯಾಣ ಮಾಡುವ ಸಹ ಪ್ರಯಾಣಿಕರ ಅದರಲ್ಲೂ ಪ್ರಮುಖವಾಗಿ ಮಹಿಳಾ ಪ್ರಯಾಣಿಕರ ಸುರಕ್ಷತೆ ನಮ್ಮ ಆದ್ಯತೆ. ಈ ಹಿನ್ನೆಲೆಯಲ್ಲಿ ಬೈಕ್ ಟ್ಯಾಕ್ಸಿ ಚಲಾಯಿಸುವವರ ದಾಖಲೆಗಳು, ಜಿಪಿಎಸ್ ಅಳವಡಿಕೆ, ವಾಹನಕ್ಕೆ ವಿಮೆ ಮತ್ತು ಇತರ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ. ಇಂತಹ ಹಲವು ನಿಯಮಗಳನ್ನು ರೂಪಿಸಿ ಬೈಕ್ ಟ್ಯಾಕ್ಸಿಗೆ ಅವಕಾಶ ನೀಡುವ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಅವರು ವಿವರಣೆ ನೀಡಿದರು.
ಬೈಕ್ ಟ್ಯಾಕ್ಸಿಗಳ ನಿಷೇಧ ರದ್ದುಪಡಿಸುವ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರಕಾರವು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ. ರಾಜ್ಯದಲ್ಲಿ ನಿಯಂತ್ರಿತ ನಿಯಮಗಳಿಗೆ ಒಳಪಟ್ಟು ಬೈಕ್ ಟ್ಯಾಕ್ಸಿ ಸೇವೆ ಕಾರ್ಯ ನಿರ್ವಹಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದಂತೆ ಆಗಿದೆ.






