ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ರಾಜ್ಯ ಸರಕಾರದಿಂದ ಯಾವುದೇ ಸೌಲಭ್ಯಗಳಿಲ್ಲ: ಸಚಿವ ಬಸವರಾಜ ರಾಯರೆಡ್ಡಿ

ಬೆಂಗಳೂರು, ಆ. 20: ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿಗಳನ್ನು ಕೇಂದ್ರ ಸರಕಾರ ನೀಡುತ್ತಿದ್ದು, ಈ ಪ್ರಶಸ್ತಿಗಳ ಪುರಸ್ಕೃತರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಯಾವುದೇ ಸೌಲಭ್ಯಗಳು ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ.
ಗುರುವಾರ ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಆಡಳಿತ ಪಕ್ಷದ ಸದಸ್ಯ ಬಿ.ಬಿ.ಚಿಮ್ಮನಕಟ್ಟಿ ಕೇಳಿದ ಪ್ರಶ್ನೆಗೆ ಸಚಿವ ಶಿವರಾಜ್ ತಂಗಡಗಿ ಪರವಾಗಿ ಉತ್ತರಿಸಿದ ರಾಯರೆಡ್ಡಿ, ಕೇಂದ್ರ ಸರಕಾರ ಪದ್ಮ ಪ್ರಶಸ್ತಿಗಳನ್ನು ನೀಡುತ್ತಿದ್ದು, ಯಾವುದೇ ಮಾಸಾಶನವನ್ನು ಅವರು ಕೊಡುವುದಿಲ್ಲ. ಈ ಬಗ್ಗೆ ಪ್ರತ್ಯೇಕ ಮನವಿ ನೀಡಿದರೆ ಪರಿಶೀಲನೆ ಮಾಡಲಾಗುವುದು ಎಂದರು.
ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಸದಸ್ಯ ಚಿಮ್ಮನಕಟ್ಟಿ, ಪದ್ಮ ಪುರಸ್ಕೃತರಿಗೆ ಒಡಿಶಾ, ತೆಲಂಗಾಣ ರಾಜ್ಯಗಳಲ್ಲಿ 25 ಸಾವಿರ ರೂ. ಮಾಸಾಶನ ನೀಡಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ಪದ್ಮ ಪ್ರಶಸ್ತಿ ಪಡೆದವರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಅವರಿಗೆ ಮಾಸಾಶನ ನೀಡುವುದರ ಜೊತೆಗೆ ವೈದ್ಯಕೀಯ ಸೌಲಭ್ಯವನ್ನು ಒದಗಿಸಬೇಕು ಎಂದು ಕೋರಿದರು.




