ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ; ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿ ತೀರ್ಮಾನ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡುವ ಕುರಿತು ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಭಾರತ ಜನನಿಯ ತನುಜಾತೆಯಾದ ಕನ್ನಡಮ್ಮನಿಗೆ ನಾಡಗೀತೆ ಇರುವಂತೆ, ಕನ್ನಡಿಗರ ಸ್ವಾಭಿಮಾನವನ್ನು ಪ್ರತಿನಿಧಿಸುವ ಅಧಿಕೃತ ನಾಡಧ್ವಜವೂ ಇರಬೇಕೆಂಬುದು ನಮ್ಮ ಆಶಯವಾಗಿದೆ ಎಂದು ಹೇಳಿದ್ದಾರೆ.
ಈಗಾಗಲೇ ಕನ್ನಡಿಗರ ಭಾವನೆಗಳ ಹೆಗ್ಗುರುತಾಗಿ ಕೆಂಪು-ಹಳದಿ ಬಣ್ಣದ ಬಾವುಟವಿದೆ. ಕನ್ನಡದ ಜ್ಞಾನ ಪರಂಪರೆ, ಸಂಸ್ಕೃತಿ, ಸರ್ವಧರ್ಮ ಸಮಾನತೆ ಹಾಗೂ ಶಾಂತಿಯ ಸಂದೇಶ ಸಾರುವ ಈ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಿ ನಾಡಧ್ವಜವನ್ನಾಗಿ ಮಾಡುವ ಕುರಿತು ನಮ್ಮ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.
ಭಾರತದ ಒಕ್ಕೂಟ ವ್ಯವಸ್ಥೆಯೊಳಗೆ ಕರ್ನಾಟಕದ ಅಸ್ಮಿತೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಈ ನಾಡಧ್ವಜದ ಕುರಿತು ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.






