ʼಕುಡಿಯುವ ನೀರು ಯೋಜನೆಗಳಿಗೆ ಭೂಮಿ ಸ್ವಾಧೀನʼ | ಡಿಸಿ, ಸಿಇಒಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು: ಪ್ರಿಯಾಂಕ್ ಖರ್ಗೆ ಸೂಚನೆ

ಪ್ರಿಯಾಂಕ್ ಖರ್ಗೆ
ಬೆಂಗಳೂರು : ಕುಡಿಯುವ ನೀರಿಗೆ ಸಂಬಂಧಿಸಿದ ಹಾಗೂ ಇನ್ನಿತರ ಸರಕಾರದ ಯೋಜನೆಗಳಿಗೆ ಸಂಬಂಧಿಸಿದಂತೆ ಭೂಮಿ ವಶಪಡಿಸಿಕೊಳ್ಳುವ ವಿಚಾರದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿ ಸಿಇಒಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಲಜೀವನ್ ಮಿಷನ್ ಕಾರ್ಯಕ್ರಮದಡಿ ರಾಜ್ಯದಾದ್ಯಂತ ಮನೆ ಮನೆಗೆ ನೀರು ಕೊಡುವ ಕಾಮಗಾರಿಗಳು ಭರದಿಂದ ಸಾಗಿದ್ದು, ಈ ಯೋಜನೆಗಾಗಿ ಮಂಜೂರು ಮಾಡಲಾದ ಅನುದಾನವನ್ನು ಪೂರ್ಣವಾಗಿ ಬಳಸಿಕೊಳ್ಳಲಾಗಿದೆ, ರಾಜ್ಯದಾದ್ಯಂತ ಈ ಯೋಜನೆಯನ್ನು ಇನ್ನು ಎರಡರಿಂದ ಮೂರು ವರ್ಷಗಳ ಕಾಲಮಿತಿಯಲ್ಲಿ ಅನುಷ್ಠಾನ ಮಾಡಲಾಗುವುದು ಎಂದು ತಿಳಿಸಿದರು.
ಸುಸ್ಥಿರ ನೀರಿನ ಮೂಲಗಳಿಂದ ನೀರು ಸರಬರಾಜು ಮಾಡಲಾಗುತ್ತಿದ್ದು, ಇದು ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುತ್ತಿದೆ, ಹಿಂದಿನ ಸರಕಾರದ ಅವಧಿಯಲ್ಲಿ ಕಳಪೆ ಕಾಮಗಾರಿಗಳು ನಡೆದಿದ್ದು, ಅದನ್ನು ಸರಿಪಡಿಸಲು ಹೆಚ್ಚು ಸಮಯ ಹಿಡಿಯುತ್ತಿದೆ. ನೀರು ಸಂಪರ್ಕ ನೀಡಲು ಕೆಲವೆಡೆ ರಸ್ತೆ ಅಗೆಯಲಾಗಿದ್ದು, ಹಾಳಾಗಿರುವ ರಸ್ತೆಗಳನ್ನು ಟೆಂಡರುದಾರರನ್ನೇ ಹೊಣೆಗಾರರನ್ನಾಗಿಸಿ ಅವುಗಳನ್ನು ಸುಸ್ಥಿತಿಗೆ ತರಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
ಕಾಮಗಾರಿಗಳ ಲೋಪ ಕುರಿತಂತೆ ಪತ್ರಿಕೆಗಳಲ್ಲಿ ಪ್ರಕಟವಾಗುವ ಸುದ್ದಿಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ನೀಡಿದ ಸಲಹೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಜಿಲ್ಲಾ ಪಂಚಾಯತಿ ಅಧಿಕಾರಿಗಳಿಗೆ ಈಗಾಗಲೇ ಈ ಬಗ್ಗೆ ನಿರ್ದೇಶನ ನೀಡಲಾಗಿದ್ದು, ಪರ್ತಿ ನಿತ್ಯ ಪ್ರಕಟವಾಗುವ ದೂರುಗಳನ್ನು ಗಮನಿಸಿ ವಾರ್ತಾ ಇಲಾಖೆಯ ಮೂಲಕ ಸ್ಪಷ್ಟನೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.







