ಬಾಹುಬಲಿ ಮಹಾಮಸ್ತಕಾಭಿಷೇಕ ಪೂರ್ವ ಸಿದ್ಧತೆಗಾಗಿ ಸಮಿತಿ ರಚನೆಗೆ ಕ್ರಮ : ಪ್ರಿಯಾಂಕ್ ಖರ್ಗೆ

ಬೆಂಗಳೂರು, ಮಾ.10: ಮುಂದಿನ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಕಾರ್ಕಳದಲ್ಲಿ ಜರುಗಲಿರುವ ಬಾಹುಬಾಲಿಯ ಮಹಾಮಸ್ತಕಾಭಿಷೇಕ ಧಾರ್ಮಿಕ ಕಾರ್ಯಕ್ರಮದ ಪೂರ್ವ ಸಿದ್ಧತೆಗಾಗಿ ಸಮಿತಿಯನ್ನು ರಚನೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳವಾರ ವಿಧಾನಸಭೆಯಲ್ಲಿ ಬಿಜೆಪಿನ ಸದಸ್ಯ ಸುನಿಲ್ ಕುಮಾರ್ ಗಮನ ಸೆಳೆದ ಸೂಚನೆಗೆ ಮುಖ್ಯಮಂತ್ರಿ ಪರವಾಗಿ ಉತ್ತರ ನೀಡಿದ ಅವರು, ಸರಕಾರವು ಈ ಪ್ರಮುಖ ಧಾರ್ಮಿಕ ಕಾರ್ಯಕ್ರಮಕ್ಕೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸಮಿತಿಯನ್ನು ರಚಿಸಲಿದೆ. ಶಾಸಕರು ಹೇಳಿದಂತೆ ಮುಖ್ಯಮಂತ್ರಿ ಗಮನಕ್ಕೆ ತಂದು ಜಿಲ್ಲಾ ಮಟ್ಟದಲ್ಲಿ ಸಹಾಯಕ ಆಯುಕ್ತರ ನೇತೃತ್ವದಲ್ಲಿಯೇ ಸಮಿತಿಯನ್ನು ರಚಿಸಲು ಕ್ರಮವಹಿಸಲಾಗುವುದು ಎಂದರು.
ಈಗಾಗಲೇ ಇದರ ಸಿದ್ಧತೆಗೆ ಅಂದಾಜು 7 ಕೋಟಿ ರೂಗಳ ಅನುದಾನ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಹನ್ನೆರಡು ವರ್ಷಗಳಿಗೆ ಒಮ್ಮೆ ಜರುಗುವ ಈ ಧಾರ್ಮಿಕ ಆಚರಣೆಯನ್ನು ಅಚ್ಚುಕಟ್ಟಾಗಿ ನಡೆಸಲು ಬೇಕಾಗುವ ಎಲ್ಲ ವ್ಯವಸ್ಥೆಯನ್ನು ಸರಕಾರ ಮಾಡಿಕೊಳ್ಳಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.





