ಬೆಂಗಳೂರು ಸಂಚಾರ ವ್ಯವಸ್ಥೆ| ತಂತ್ರಜ್ಞಾನ ಆಧಾರಿತ ಕ್ರಮಗಳಿಗೆ ಆದ್ಯತೆ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿ, ಸಾರ್ವಜನಿಕರಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ತಂತ್ರಜ್ಞಾನ ಆಧಾರಿತ ಪರಿಹಾರಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ.
ಸೋಮವಾರ ನಗರದಲ್ಲಿ ಎಲ್ಲ ಸಂಚಾರ ವಿಭಾಗದ ಡಿಸಿಪಿಗಳಿಗೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದ ವಿವಿಧ ಭಾಗಗಳಲ್ಲಿ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪ್ರಮುಖ ಜಂಕ್ಷನ್‍ಗಳು ಹಾಗೂ ಹೆಚ್ಚು ವಾಹನಗಳು ಸಂಚರಿಸುವ ರಸ್ತೆಗಳಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ವೈಜ್ಞಾನಿಕ ಮತ್ತು ತಾಂತ್ರಿಕ ವಿಧಾನಗಳನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದರು.
ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಸ್ಥಾನವನ್ನು ಗಳಿಸಿದೆ. ವಿಶ್ವದ ಪ್ರಮುಖ ಐಟಿ ಕಂಪೆನಿಗಳು, ಬಹುರಾಷ್ಟ್ರೀಯ ಸಂಸ್ಥೆಗಳು ಹಾಗೂ ಹೂಡಿಕೆದಾರರು ಬೆಂಗಳೂರನ್ನು ತಮ್ಮ ವ್ಯವಹಾರ ಮತ್ತು ಹೂಡಿಕೆಯ ಕೇಂದ್ರವಾಗಿ ಆಯ್ಕೆ ಮಾಡುತ್ತಿದ್ದಾರೆ. ಇಂತಹ ಜಾಗತಿಕ ನಗರಕ್ಕೆ ತಕ್ಕಂತೆ ವಿಶ್ವಮಟ್ಟದ ಸಂಚಾರ ನಿರ್ವಹಣಾ ವ್ಯವಸ್ಥೆಯನ್ನು ರೂಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.
ಸಂಚಾರ ದಟ್ಟಣೆ ಹೆಚ್ಚಿರುವ ರಸ್ತೆಗಳಲ್ಲಿ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‍ಮೆಂಟ್ ಸಿಸ್ಟಮ್, ಕೃತಕ ಬುದ್ಧಿಮತ್ತೆ, ಸ್ಮಾರ್ಟ್ ಸಿಗ್ನಲ್ ವ್ಯವಸ್ಥೆ, ರಿಯಲ್-ಟೈಮ್ ಟ್ರಾಫಿಕ್ ಮಾನಿಟರಿಂಗ್ ಹಾಗೂ ಡೇಟಾ ಆಧಾರಿತ ಸಂಚಾರ ನಿರ್ವಹಣಾ ಕ್ರಮಗಳನ್ನು ಇನ್ನಷ್ಟು ವ್ಯಾಪಕವಾಗಿ ಅಳವಡಿಸಿಕೊಳ್ಳುವ ಕುರಿತು ಅಧಿಕಾರಿಗಳು ಕಾರ್ಯಯೋಜನೆ ರೂಪಿಸಬೇಕು ಎಂದು ಪ್ರಿಯಾಂಕ್ ಖರ್ಗೆ ನಿರ್ದೇಶಿಸಿದರು.
ಸಭೆಯಲ್ಲಿ ಪ್ರತಿಯೊಂದು ಸಂಚಾರ ವಿಭಾಗದ ಡಿಸಿಪಿಗಳು ತಮ್ಮ ವ್ಯಾಪ್ತಿಯ ಸಂಚಾರ ಪರಿಸ್ಥಿತಿ, ದಟ್ಟಣೆ ಉಂಟಾಗುವ ಪ್ರಮುಖ ಸ್ಥಳಗಳು, ಕೈಗೊಂಡಿರುವ ಕ್ರಮಗಳು ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಸಚಿವರಿಗೆ ವಿವರಿಸಿದರು. ಸಂಚಾರ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸುವ ಸಂಬಂಧ ವಿವಿಧ ಸಲಹೆಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.
ನಗರದ ಸಂಚಾರ ನಿರ್ವಹಣೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಆಧುನಿಕ ತಂತ್ರಜ್ಞಾನ ಬಳಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ವಿವಿಧ ಇಲಾಖೆಗಳ ಸಮನ್ವಯದ ಮೂಲಕ ಸಮಗ್ರ ಕಾರ್ಯತಂತ್ರ ರೂಪಿಸುವ ಕುರಿತು ಸಭೆಯಲ್ಲಿ ನಿರ್ಧರಿಸಲಾಯಿತು.
ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಸಂಚಾರ ವಿಭಾಗದ ಜಂಟಿ ಆಯುಕ್ತ ಕಾರ್ತಿಕ್ ರೆಡ್ಡಿ, ಗೃಹ ಸಚಿವರ ವಿಶೇಷಾಧಿಕಾರಿ ಲಾಬೂರಾಮ್ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಕೇವಲ ಪೊಲೀಸರ ಜವಾಬ್ದಾರಿಯಲ್ಲ: ‘ಅಪಘಾತಗಳಿಗೆ ಕಾರಣವಾಗುವ ಹಾಟ್‍ಸ್ಪಾಟ್ ಗುರುತಿಸುವಿಕೆ, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ, ತುರ್ತು ಸೇವಾ ವಾಹನಗಳಿಗೆ ಆದ್ಯತೆ, ಪಾದಚಾರಿಗಳ ಸುರಕ್ಷತೆ ಹಾಗೂ ಸಾರ್ವಜನಿಕರ ಅನುಕೂಲಕ್ಕೆ ಆದ್ಯತೆ ನೀಡುವ ರೀತಿಯಲ್ಲಿ ಸಂಚಾರ ವ್ಯವಸ್ಥೆಯನ್ನು ರೂಪಿಸಬೇಕು. ಸಂಚಾರ ಸಮಸ್ಯೆ ಕೇವಲ ಪೊಲೀಸ್ ಇಲಾಖೆಯ ಜವಾಬ್ದಾರಿ ಮಾತ್ರವಲ್ಲ. ಬಿಬಿಎಂಪಿ, ಬಿಎಂಆರ್‍ಸಿಎಲ್, ಬಿಎಂಟಿಸಿ, ನಗರಾಭಿವೃದ್ಧಿ ಇಲಾಖೆ ಹಾಗೂ ಇತರೆ ಸಂಬಂಧಿತ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ದೀರ್ಘಕಾಲೀನ ಪರಿಹಾರಗಳನ್ನು ಜಾರಿಗೊಳಿಸಬೇಕು’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.






