ಹೇಮಾವತಿ ನೀರು ಹಂಚಿಕೆ ವಿಚಾರ | ರೈತರ ಸಭೆ ಕರೆದು, ಪ್ರಕರಣ ವಾಪಸ್ ಪಡೆಯಿರಿ : ಆರ್.ಅಶೋಕ್

ಬೆಂಗಳೂರು : ಹೇಮಾವತಿ ನೀರು ಹಂಚಿಕೆ ವಿಚಾರದಲ್ಲಿ ಸರಕಾರ ಎಲ್ಲ ರೈತರನ್ನು ಹಾಗೂ ಸರ್ವಪಕ್ಷಗಳ ಪ್ರಮುಖರನ್ನು ಕರೆದು ಸಭೆ ಮಾಡಿ ಚರ್ಚಿಸಬೇಕು. ರೈತರ ವಿರುದ್ಧ ದಾಖಲಿಸಿದ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಗಡಿಗೆ ಹೇಮಾವತಿ ನೀರು ನೀಡಲು ತುಮಕೂರಿನ ರೈತರು ಪ್ರತಿಭಟಿಸುತ್ತಿರುವಾಗ, ಎರಡೂ ಜಿಲ್ಲೆಗಳ ಪ್ರತಿನಿಧಿಗಳು ಹಾಗೂ ರೈತರ ಜೊತೆ ಸರಕಾರ ಚರ್ಚಿಸಬೇಕಿತ್ತು. ಈ ಕೆಲಸವನ್ನು ಮಾಡದೆಯೇ ರೈತರ ನಡುವೆಯೇ ಎತ್ತಿ ಕಟ್ಟುವ ಕೆಲಸ ಮಾಡಿದೆ. ರೈತರಿಗೆ ಮನವರಿಕೆ ಮಾಡುವ ಬದಲು ಬೆದರಿಕೆ ಹಾಕುವುದು ಒಳ್ಳೆಯದಲ್ಲ ಎಂದು ಆಕ್ಷೇಪಿಸಿದರು.
ರೈತರ ವಿರುದ್ಧ ಪ್ರಕರಣ ದಾಖಲಿಸುವುದು ಅಕ್ಷಮ್ಯ ಅಪರಾಧ. ರೈತರ ಜೊತೆಗೆ ಚರ್ಚಿಸಿ ಸಮನ್ವಯ ಸಾಧಿಸಬೇಕು. ಡಿಸಿಎಂ ಡಿ.ಕೆ.ಶಿವಕುಮಾರ್ ಕುರ್ಚಿ ಹೋದರೆ ಅಧಿಕಾರವೇ ಇರುವುದಿಲ್ಲ. ರಾಜ್ಯ ಸರಕಾರ ಎರಡು ಜಿಲ್ಲೆಗಳ ಸರ್ವಪಕ್ಷ ಸಭೆ ಕರೆದು ತೀರ್ಮಾನ ಕೈಗೊಳ್ಳಬೇಕು, ಕೇಸುಗಳನ್ನು ವಾಪಸ್ ಪಡೆಯಬೇಕು ಎಂದು ಅವರು ಆಗ್ರಹಿಸಿದರು.
ಬೀದಿಗಿಳಿಯಬೇಕಾಗುತ್ತದೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಾಸ್ಕ್ ಫೋರ್ಸ್ ಮಾಡಿ, ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಇದು ಕೋಮುವಾದದ ವಿರುದ್ಧ ಅಲ್ಲ, ಸಂಘಪರಿವಾರದ ವಿರುದ್ಧದ ಫೋರ್ಸ್. ಈ ಹಿಂದೆ ಇದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಅವರಿಗೆ ಬೇಕಾದವರನ್ನು ನೇಮಿಸಿಕೊಂಡಿದ್ದಾರೆ. ಸುಳ್ಳು ಅಪಾದನೆ ಮಾಡಿ ಪರಿವಾರದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿದರೆ, ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮೇಕೆದಾಟು ಯೋಜನೆಗೆ ಆಗ್ರಹಿಸಿ ತಮಿಳುನಾಡು ಸರಕಾರದ ಮುಂದೆ ಪ್ರತಿಭಟಿಸಲು, ಕಲ್ಲು ಹೊಡೆಯಲು ನಾವು ಸಿದ್ಧರಿದ್ದೇವೆ. ಡಿಸಿಎಂ ಡಿ.ಕೆ.ಶಿವಕುಮಾರ್ ಇದಕ್ಕೆ ಸಿದ್ಧರಿದ್ದಾರೆಯೇ? ಇಲಾಖೆಗಳಿಗೆ ಅನುದಾನ ನೀಡದೆಯೇ ಸಚಿವರಿಗೆ ಕೆಲಸ ಮಾಡಲು ಆಗುತ್ತಿಲ್ಲ. ಕೆಎಸ್ಸಾರ್ಟಿಸಿಗೆ ಹಣ ನೀಡಿಲ್ಲ. ಜೋಳ ಖರೀದಿ ಕೇಂದ್ರಗಳಿಗೆ ಹಣ ನೀಡಿಲ್ಲ. ಸರಕಾರಿ ಆಸ್ಪತ್ರೆಗಳಿಗೆ ಸಂಬಳಕ್ಕೆ ಹಣ ಕೊಟ್ಟಿಲ್ಲ ಎಂದು ಅವರಿ ಟೀಕಿಸಿದರು.







