ಅಲ್ಪಸಂಖ್ಯಾತರ ಶಿಕ್ಷಣಕ್ಕಾಗಿ 2900 ಕೋಟಿ ರೂ.ಖರ್ಚು : ಸಚಿವ ಝಮೀರ್ ಅಹ್ಮದ್ ಖಾನ್

ಬೆಂಗಳೂರು : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಪ್ರಸಕ್ತ ಸಾಲಿನ ಬಜೆಟ್ 4500 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ. ಇದರಲ್ಲಿ 2900 ಕೋಟಿ ರೂ.ಗಳನ್ನು ಶಿಕ್ಷಣಕ್ಕಾಗಿ ಖರ್ಚು ಮಾಡಲಾಗುತ್ತಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ತಿಳಿಸಿದರು.
ಶನಿವಾರ ನಗರದ ಕಬ್ಬನ್‍ಪೇಟೆ ಮುಖ್ಯರಸ್ತೆಯಲ್ಲಿರುವ ಎಚ್‍ಎಚ್‍ಎಸ್ ಮತ್ತು ಎಚ್‍ಎಂಎಸ್ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ವಿವಿಧ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಅಲ್ಪಸಂಖ್ಯಾತ ಮುಸ್ಲಿಮ್ ಸಮುದಾಯವು ಶೈಕ್ಷಣಿಕವಾಗಿ ತುಂಬಾ ಹಿಂದುಳಿದಿದೆ. ಆದುದರಿಂದ, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ. ಹಜ್ ಭವನದಲ್ಲಿ ಅಲ್ಪಸಂಖ್ಯಾತರಿಗಾಗಿ ಐಎಎಸ್, ಐಪಿಎಸ್, ಕೆಎಎಸ್‍ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕೈಗೊಳ್ಳಲು ತರಬೇತಿ ನೀಡಲಾಗುತ್ತಿದೆ. ಕಳೆದ ವರ್ಷ 400 ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗಿತ್ತು. ಅದರಲ್ಲಿ 105ಮಂದಿ ಸರಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಝಮೀರ್ ಅಹ್ಮದ್ ಖಾನ್ ಹೇಳಿದರು.
ಮುಂದಿನ ವರ್ಷ 500 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆ. ಅದೇ ರೀತಿ, ಇದೇ ಮೊದಲ ಬಾರಿಗೆ ನಮ್ಮ ರಾಜ್ಯದಲ್ಲಿ 400 ಮಂದಿ ಅಭ್ಯರ್ಥಿಗಳಿಗೆ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಪೂರ್ವ ತರಬೇತಿ ನೀಡಲಾಗಿದೆ. ರಾಜ್ಯ ಸರಕಾರ ಶೀಘ್ರದಲ್ಲೆ ಸುಮಾರು ಒಂದು ಸಾವಿರ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸುವ ಸಾಧ್ಯತೆಗಳಿವೆ. ಈ ತರಬೇತಿಯಲ್ಲಿ ಉತ್ತೀರ್ಣರಾಗಿರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಸಿಗುವ ವಿಶ್ವಾಸವಿದೆ ಎಂದು ಅವರು ತಿಳಿಸಿದರು.
ಎಂಬಿಬಿಎಸ್ ಶಿಕ್ಷಣ ಪಡೆಯುತ್ತಿರುವ ಮಕ್ಕಳಿಗೆ ವಾರ್ಷಿಕ 5 ಲಕ್ಷ ರೂ., ವಿದೇಶಕ್ಕೆ ಹೆಚ್ಚಿನ ವಿದ್ಯಾಭ್ಯಾಸಕ್ಕೆ ತೆರುವವರಿಗೆ 30 ಲಕ್ಷ ರೂ.ಗಳ ಆರ್ಥಿಕ ನೆರವನ್ನು ನೀಡುತ್ತಿದ್ದೇವೆ. ಕೌಶಲ್ಯಾಭಿವೃದ್ಧಿಗಾಗಿ ಮುಖ್ಯಮಂತ್ರಿ 20 ಕೋಟಿ ರೂ.ಗಳನ್ನು ಮೀಸಲಿರಿಸಿದ್ದಾರೆ ಎಂದು ಝಮೀರ್ ಅಹ್ಮದ್ ಖಾನ್ ಮಾಹಿತಿ ನೀಡಿದರು.
ಜಿ.ಎ.ಬಾವಾ ಅವರು ಹಮೀದ್ ಶಾ ಆಡಳಿತ ಸಮಿತಿಯ ಜವಾಬ್ದಾರಿ ವಹಿಸಿಕೊಂಡ ಬಳಿಕ, ಅವರ ತಂಡದ ಪ್ರಯತ್ನದಿಂದಾಗಿ ಹಲವಾರು ಉತ್ತಮ ಕೆಲಸಗಳು ಇಲ್ಲಿ ಆಗಿದೆ. ಕಾಂಪ್ಲೆಕ್ಸ್ ನ ಆದಾಯವು ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಐಟಿಐ ಸಂಸ್ಥೆಯನ್ನು ಉನ್ನತಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ. ರಕ್ತ ನಿಧಿ, ಆರೋಗ್ಯ ಕೇಂದ್ರ, ಡಯಾಲಿಸಿಸ್ ಕೇಂದ್ರ ಸ್ಥಾಪನೆ ಮಾಡಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರಣಾಂತರಗಳಿಂದ ಡಯಾಲಿಸಿಸ್ ಕೇಂದ್ರ ಸ್ಥಗಿತವಾಗಿದೆ. ಆದಷ್ಟು ಬೇಗ ಅದನ್ನು ಪುನರ್ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು. ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ನರ್ಸ್, ಟ್ಯಾಕ್ಸಿ ಚಾಲಕ, ವಾಣಿಜ್ಯ ರೆಫ್ರಿಜೆರೇಟರ್ ಟೆಕ್ನಿಶಿಯನ್ ಸೇರಿದಂತೆ ಇತರ ತರಬೇತಿಗಳು ನೀಡುತ್ತಿರುವುದು ಸ್ವಾಗತಾರ್ಹ ಎಂದು ಝಮೀರ್ ಅಹ್ಮದ್ ಖಾನ್ ಹೇಳಿದರು.







