ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣ: ಕೃಪಾ ಆಳ್ವಾ ಸಹಿತ ಮೂವರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು

ಕೃಪಾ ಆಳ್ವಾ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ ಸೇರಿದಂತೆ ಮೂವರಿಗೆ 66ನೇ ಸಿಸಿಹೆಚ್ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಸಿದ್ದರಾಮಯ್ಯ ಅವರ ದೂರಿನ ಮೇರೆಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿದಂತೆ ಕೃಪಾ ಆಳ್ವಾ, ವಿನೋದ್ ಕುಮಾರ್ ಹಾಗೂ ಪ್ರಶಾಂತ್ ಕುಮಾರ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ 66 ನೇ ಸಿಸಿಹೆಚ್ ನ್ಯಾಯಾಲಯ ಮೂವರಿಗೂ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.
ತಲಾ ಒಂದು ಲಕ್ಷ ರೂ. ವೈಯಕ್ತಿಕ ಬಾಂಡ್ ಸಲ್ಲಿಸಬೇಕು, ಸಾಕ್ಷ್ಯಗಳನ್ನು ನಾಶಪಡಿಸಬಾರದು, ತನಿಖೆಗೆ ಸಹಕರಿಸಬೇಕು ಹಾಗೂ ಜಾಮೀನು ಅರ್ಜಿ ವಜಾಗೊಂಡರೆ ಕೂಡಲೇ ತನಿಖಾಧಿಕಾರಿಯ ಮುಂದೆ ಶರಣಾಗಬೇಕು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿರುವ ರಾಕೇಶ್ ಶೆಟ್ಟಿ, ಚಂದನ್, ಮೋಹನ್ ಗೌಡ ಹಾಗೂ ಪ್ರಜ್ವಲ್ ಪ್ರಸಾದ್ ಅವರ ಅರ್ಜಿಗಳ ವಿಚಾರಣೆಯನ್ನು ನ.4ಕ್ಕೆ ಮುಂದೂಡಲಾಗಿದೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ (ಎಸ್ಪಿಪಿ) ಬಿ.ಎನ್. ಜಗದೀಶ್ ಹಾಜರಾಗಿ, ನಿರೀಕ್ಷಣಾ ಜಾಮೀನು ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಅರ್ಜಿಗಳ ವಿಚಾರಣೆಯನ್ನು ನವೆಂಬರ್ 4ಕ್ಕೆ ಮುಂದೂಡಿತು.






