‘ಎಸ್ಐಆರ್’ ವಿಶೇಷ ನೋಡಲ್ ಅಧಿಕಾರಿಗಳನ್ನು ನೇಮಿಸಿಲು ಒತ್ತಾಯ

ಸಾಂದರ್ಭಿಕ ಚಿತ್ರ | Photo Credit : PTI
ಬೆಂಗಳೂರು : ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ(ಎಸ್ಐಆರ್)ಯಲ್ಲಿ ಕಾಡಂಚಿನಲ್ಲಿರುವ ಆದಿವಾಸಿ ಬುಡಕಟ್ಟು ಸಮುದಾಯಗಳ ಕೈಬಿಡುವ ಸಾದ್ಯತೆ ಇದ್ದು, ಇದಕ್ಕಾಗಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ವಿಶೇಷ ನೋಡಲ್ ಅಧಿಕಾರಿಗಳನ್ನು ನೇಮಿಸಿ ಮತದಾರ ಪಟ್ಟಿಗೆ ಸೇರಿಸುವಂತೆ ನಿರ್ದೇಶನ ನೀಡಬೇಕು ಎಂದು ಆದಿವಾಸಿ ಬುಡಕಟ್ಟು ಸಮುದಾಯಗಳ ಸಂಘಟನೆಯ ಮುಖಂಡರು ಮನವಿ ಮಾಡಿದ್ದಾರೆ.
ಬುಧವಾರ ಅಲೆಮಾರಿ ಬುಡಕಟ್ಟು ಮಹಾಸಭಾ, ಕರ್ನಾಟಕ ಅಲೆಮಾರಿ ಹಕ್ಕಿಪಿಕ್ಕಿ ಬುಡಕಟ್ಟು ಸಂರಕ್ಷಣಾ ಸಮಿತಿ ವತಿಯಿಂದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಡಾ.ಅಶೋಕ್ ಅವರಿಗೆ ಮನವಿ ಸಲ್ಲಿಸಿ, ಆದಿವಾಸಿ ಬುಡಕಟ್ಟು ಸಮುದಾಯಗಳ ಸಮಸ್ಯೆಗಳು ಸೇರಿದಂತೆ ಆದಿವಾಸಿ ನಿಗಮ ಮತ್ತು ಆಯೋಗದ ರಚನೆ, ಆದಿವಾಸಿ ಸಮುದಾಯಗಳ ಒಳಮೀಸಲಾತಿ, ಉದ್ಯೋಗ ನೇರ ನೇಮಕ ಕುರಿತು ಚರ್ಚಿಸಿದರು.
ಸಭೆಯಲ್ಲಿ ಅಲೆಮಾರಿ ಬುಡಕಟ್ಟು ಮಹಾಸಭಾದ ಪ್ರಧಾನ ಕಾರ್ಯದರ್ಶಿ ನಾಗರಾಜ್, ಅಲೆಮಾರಿ ಹಕ್ಕಿಪಿಕ್ಕಿ ಬುಡಕಟ್ಟು ಸಂರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಜಗ್ಗು, ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ವಡ್ಡರಗುಡಿ ಚಿಕ್ಕಣ್ಣರವರು, ಲತಾ, ಐಗಾನ್, ಮುತ್ತು ಉಪಸ್ಥಿತರಿದ್ದರು.




