ಎಸ್ಐಆರ್ನಿಂದ ದೇಶದ ಆಡಳಿತ ವ್ಯವಸ್ಥೆಯೇ ಹಾಳಾಗಿದೆ: ಸಚಿವ ಈಶ್ವರ್ ಖಂಡ್ರೆ

ಈಶ್ವರ್ ಖಂಡ್ರೆ
ಬೆಂಗಳೂರು : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಿಂದ ದೇಶದ ಆಡಳಿತ ವ್ಯವಸ್ಥೆಯೇ ಸಂಪೂರ್ಣ ಹದಗೆಟ್ಟಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ.ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರು ತಿಂಗಳ ಕಾಲ ಶಾಲಾ ಶಿಕ್ಷಕರು ಹಾಗೂ ಸರ್ಕಾರಿ ನೌಕರರನ್ನು ಎಸ್ಐಆರ್ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ. ಇದರಿಂದ ಸರ್ಕಾರಿ ಶಾಲೆಗಳಲ್ಲಿ ಸಮರ್ಪಕವಾಗಿ ಪಾಠಪ್ರವಚನಗಳು ನಡೆಯುತ್ತಿಲ್ಲ. ಸರ್ಕಾರಿ ಕಚೇರಿಗಳಲ್ಲಿ ಕಡತಗಳ ವಿಲೇವಾರಿಯೂ ಆಗುತ್ತಿಲ್ಲ ಎಂದು ಹೇಳಿದರು.
ಮಿಗಿಲಾಗಿ ಲಕ್ಷಾಂತರ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಈ ಹಿಂದೆ ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಮೃತಪಟ್ಟವರು, ವಿಳಾಸ ಬದಲಾಯಿಸಿದವರು ಹಾಗೂ ಎರಡು ಕಡೆ ಹೆಸರು ಹೊಂದಿರುವವರ ಪಟ್ಟಿಯನ್ನು ಪರಿಶೀಲಿಸಿ ತಿದ್ದುಪಡಿ ಮಾಡಲಾಗುತ್ತಿತ್ತು. ಆದರೆ, ಈಗ ತಾರ್ಕಿಕ ಅಸಂಗತತೆ (ಲಾಜಿಕಲ್ ಡಿಸ್ಕ್ರೆಪೆನ್ಸಿ) ಎಂಬ ಹೆಸರಿನಲ್ಲಿ ಒಂದು ಕುಟುಂಬದಲ್ಲಿ ಆರು ಮಕ್ಕಳಿದ್ದರೆ, ಅವರ ಹೆಸರು 2002ರ ಮತದಾರರ ಪಟ್ಟಿಯಲ್ಲಿ ಇಲ್ಲ ಎಂಬ ಕಾರಣಕ್ಕೆ ಅನಗತ್ಯವಾಗಿ ತೊಂದರೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.
ಎಸ್ಐಆರ್ ಪ್ರಕ್ರಿಯೆಯಿಂದ ಅರ್ಹ ಮತದಾರರಿಗೂ ಘೋರ ಅನ್ಯಾಯವಾಗುತ್ತಿದೆ. ಇದರ ವಿರುದ್ಧ ನಮ್ಮ ಪಕ್ಷದ ನಾಯಕರು ಹೋರಾಟ ನಡೆಸುತ್ತಿದ್ದಾರೆ. ಈ ಸಂಬಂಧ ಸುಪ್ರೀಂ ಕೋರ್ಟ್ನಲ್ಲಿಯೂ ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದರು.
ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬವಾಗುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಎಸ್ಐಆರ್ನಿಂದಾಗಿ ಅಂತಿಮ ಮತದಾರರ ಪಟ್ಟಿ ಲಭ್ಯವಾಗದ ಕಾರಣ ಸ್ಥಳೀಯ ಸಂಸ್ಥೆಗಳ ಚುನಾವಣೆಗಳೂ ವಿಳಂಬವಾಗುತ್ತಿವೆ ಎಂದು ಅಭಿಪ್ರಾಯಪಟ್ಟರು.
ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ‘ನಮ್ಮ ಮತ ನಮ್ಮ ಹಕ್ಕು’ ಎಂಬ ಹಕ್ಕಿದೆ. ಮತದಾರರು ತಮ್ಮ ಹಕ್ಕನ್ನು ಕೇಳುತ್ತಿದ್ದಾರೆ. ಆದರೆ, ಅವರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟು ಚುನಾವಣೆ ನಡೆಸಲು ಸಾಧ್ಯವೇ ಎಂದು ಈಶ್ವರ್ ಖಂಡ್ರೆ ಪ್ರಶ್ನಿಸಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸತ್ಯಕ್ಕಾಗಿ ಹೋರಾಡುತ್ತಿದ್ದಾರೆ. ತಮ್ಮ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಆರೋಪದಲ್ಲಿ ಸತ್ಯಾಂಶ ಇಲ್ಲದೆ ಅವರು ಇಂತಹ ಹೇಳಿಕೆ ನೀಡುವುದಿಲ್ಲ. ಈ ಹಿಂದೆ ಪೆಗಾಸಸ್ ಸ್ಪೈವೇರ್ ವಿಚಾರದಲ್ಲಿಯೂ ಅವರು ಧ್ವನಿ ಎತ್ತಿದ್ದರು. ಆದರೆ, ಕೇಂದ್ರ ಸರ್ಕಾರ ದಮನಕಾರಿ ಪ್ರವೃತ್ತಿಯನ್ನು ಅನುಸರಿಸಿತು ಎಂದು ಹೇಳಿದರು.






