ನಕಲಿ ಭೂದಾಖಲೆ-ಸರಕಾರಿ ಗೋಮಾಳ ಒತ್ತುವರಿ ವಿರುದ್ಧ ಕಠಿಣ ಕ್ರಮ : ಡಿಸಿಎಂ ಡಾ.ಜಿ.ಪರಮೇಶ್ವರ್

ಡಾ.ಜಿ.ಪರಮೇಶ್ವರ್
ಬೆಂಗಳೂರು : ರಾಜ್ಯದಲ್ಲಿ ಭೂಮಿಗೆ ಸಂಬಂಧಪಟ್ಟಂತೆ ನಕಲಿ ದಾಖಲೆ ಸೃಷ್ಟಿಸುವುದು ಹಾಗೂ ಗೋಮಾಳ ಒತ್ತುವರಿ ಮಾಡುವುದು ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಂದಾಯ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ದೇವನಹಳ್ಳಿಯ ತಹಶೀಲ್ದಾರ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಭೂಮಿಯ ಮೌಲ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸುವುದು, ಮತ್ತೊಬ್ಬರ ಹೆಸರಿನಲ್ಲಿ ಅರ್ಜಿ ಸಲ್ಲಿಸುವುದು ಹಾಗೂ ಕೆಲವು ಅಧಿಕಾರಿಗಳ ಸಹಭಾಗಿತ್ವದಲ್ಲಿ ಅಕ್ರಮ ಖಾತೆ ಬದಲಾವಣೆ ನಡೆಯುತ್ತಿರುವ ಆರೋಪಗಳ ಕೇಳಿಬಂದಿದ್ದು, ಈ ಸಂಬಂಧ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದರು.
ಭೂದಾಖಲೆ ನಕಲಿ ಸೃಷ್ಟಿ ಕುರಿತು ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಅವರೊಂದಿಗೆ ಚರ್ಚಿಸಲಾಗಿದೆ. ತಂತ್ರಜ್ಞಾನದ ಬಳಕೆಯಿಂದ ಇಂತಹ ಅಕ್ರಮಗಳನ್ನು ತಡೆಯಲು ಹೆಚ್ಚಿನ ಅವಕಾಶವಿದ್ದು, ಯಾವುದೇ ರೀತಿಯ ನಕಲಿ ದಾಖಲೆಗಳ ಸೃಷ್ಟಿಗೆ ಅವಕಾಶ ನೀಡಬಾರದು ಎಂದು ಸೂಚಿಸಲಾಗಿದೆ. ಬಾಕಿ ಇರುವ ಅನುಮಾನಾಸ್ಪದ ಪ್ರಕರಣಗಳನ್ನು ಪರಿಶೀಲಿಸಿ, ಅಕ್ರಮ ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಬಿಲ್ಡರ್ ಗಳು ಸೇರಿದಂತೆ ಪ್ರಭಾವಿ ವ್ಯಕ್ತಿಗಳು ಸರಕಾರಿ ಗೋಮಾಳ ಜಮೀನುಗಳನ್ನು ಒತ್ತುವರಿ ಮಾಡಿಕೊಂಡಿರುವ ಕುರಿತು ದೂರುಗಳು ಕೇಳಿಬಂದಿವೆ. ಇಂತಹ ಸಮಸ್ಯೆಗಳು ಬೆಂಗಳೂರು ಸುತ್ತಮುತ್ತ ಮಾತ್ರವಲ್ಲದೆ ತುಮಕೂರು, ಮೈಸೂರು, ಬೆಳಗಾವಿ ಸೇರಿದಂತೆ ಬೆಳೆಯುತ್ತಿರುವ ನಗರ ಪ್ರದೇಶಗಳಲ್ಲಿಯೂ ಕಂಡುಬರುತ್ತಿವೆ. ಸರಕಾರಿ ಜಮೀನುಗಳನ್ನು ಒತ್ತುವರಿ ಮಾಡಿರುವವರು ಎಷ್ಠೇ ಪ್ರಭಾವಿಗಳಾಗಿದ್ದರೂ ನಿಯಮಾನುಸಾರ ತೆರವುಗೊಳಿಸಬೇಕು ಎಂದು ಈಗಾಗಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.
ಕೇಂದ್ರದ ನೆರವಿಗಾಗಿ ಸರ್ವಪಕ್ಷ ನಿಯೋಗ :
ಬರದಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ತಕ್ಷಣ ಆರ್ಥಿಕ ನೆರವು ಒದಗಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ಸುಮಾರು 50 ಲಕ್ಷ ಅರ್ಹ ರೈತರಿಗೆ ತಲಾ 2,500 ರೂ.ಗಳಂತೆ ಒಟ್ಟಾರೆ 1,250 ಕೋಟಿ ರೂ., ಮೊದಲ ಕಂತಿನ ಇನ್ಪುಟ್ ಸಬ್ಸಿಡಿ ನೀಡಲು ನಿರ್ಧರಿಸಲಾಗಿದ್ದು, ಈ ಕುರಿತು ಜಿಲ್ಲಾಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ರೈತರ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರಕಾರದ ನೆರವಿಗಾಗಿ ಕಾಯ್ದೆ ರಾಜ್ಯ ಸರಕಾರ ತನ್ನ ವತಿಯಿಂದ ಪರಿಹಾರ ನೀಡಲು ಮುಂದಾಗಿದೆ. ಬರದಿಂದ ಉಂಟಾಗಿರುವ ನಷ್ಟದ ಕುರಿತು ಕೇಂದ್ರ ಸರಕಾರಕ್ಕೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಕೇಂದ್ರ ಸರಕಾರದ ಎನ್ಡಿಆರ್ ಎಫ್ ಮಾರ್ಗಸೂಚಿಗಳ ಪ್ರಕಾರ ರಾಜ್ಯಕ್ಕೆ ಬರ ಪರಿಹಾರ ಒದಗಿಸುವಂತೆ ಕೋರಿ ವಿವರವಾದ ಮನವಿ ಪತ್ರ ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳು, ನಾನು ಹಾಗೂ ವಿರೋಧ ಪಕ್ಷಗಳ ಪ್ರತಿನಿಧಿಗಳನ್ನು ಒಳಗೊಂಡ ಸರ್ವಪಕ್ಷ ನಿಯೋಗದೊಂದಿಗೆ ಹೊಸದಿಲ್ಲಿಗೆ ತೆರಳಿ ಕೇಂದ್ರ ಗೃಹ ಸಚಿವರು, ಕೃಷಿ ಸಚಿವರು ಹಾಗೂ ಪ್ರಧಾನಮಂತ್ರಿಗಳನ್ನು ಭೇಟಿ ಮಾಡುವ ಉದ್ದೇಶವಿದೆ ಎಂದು ತಿಳಿಸಿದರು.






