ಬೆಂಗಳೂರಿನಲ್ಲಿ ದಿಢೀರ್ ಮಳೆ, ನಾಲ್ಕು ದಿನ ಯೆಲ್ಲೋ ಅಲರ್ಟ್

ಸಾಂದರ್ಭಿಕ ಚಿತ್ರ
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗುರುವಾರ ಮಧ್ಯಾಹ್ನ ದಿಢೀರ್ ಮಳೆ ಸುರಿದಿದ್ದು, ನಗರದ ಹಲವು ಪ್ರದೇಶಗಳಲ್ಲಿ ನೀರು ತುಂಬಿ ಜನಜೀವನ ಅಸ್ತವ್ಯಸ್ತಗೊಂಡರೆ, ಮುಂದಿನ ನಾಲ್ಕು ದಿನಗಳ ಕಾಲ(ಅ.26) ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಲ್ಲಿನ ಬನ್ನಪ್ಪಪಾರ್ಕ್, ಆರ್ಟಿನಗರ, ವಸಂತನಗರ, ಶಿವಾಜಿನಗರ, ಜಯನಗರ, ಸೇರಿದಂತೆ ಬೆಂಗಳೂರಿನ ನಾನಾ ಭಾಗಗಳಲ್ಲಿ ಧಾರಾಕಾರ ಮಳೆ ದಾಖಲಾಗಿದೆ. ಬೆಳಗ್ಗೆಯಿಂದಲೇ ನಗರದಲ್ಲಿ ಮೋಡಕವಿದ ವಾತಾವರಣವಿತ್ತು. ಮಧ್ಯಾಹ್ನದ ವೇಳೆಗೆ ಏಕಾಏಕಿ ಮಳೆ ಆರಂಭವಾಗುತ್ತಿದ್ದಂತೆ ಪಾದಚಾರಿಗಳು ಹಾಗೂ ದ್ವಿಚಕ್ರ ವಾಹನ ಸವಾರರು ತೊಂದರೆ ಅನುಭವಿಸಿದರು. ಮಳೆಯಿಂದ ರಕ್ಷಿಸಿಕೊಳ್ಳಲು ಕೆಲವರು ರಸ್ತೆಬದಿಯ ಹೋಟೆಲ್ಗಳು ಹಾಗೂ ಮೇಲ್ಸೇತುವೆಗಳ ಕೆಳಗೆ ಆಶ್ರಯ ಪಡೆದರು.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆಯ ಪ್ರಕಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅ.26ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಏಳು ದಿನಗಳಲ್ಲಿಯೂ ರಾಜ್ಯದ ವಿವಿಧೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕೆಲವೆಡೆ ಜೋರಾದ ಗಾಳಿಯೂ ಬೀಸಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅ.22ರಿಂದ 26ರ ವರೆಗೆ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯ ಪ್ರಮಾಣದಲ್ಲಿ ವ್ಯತ್ಯಾಸವಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಗುರುವಾರ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದ್ದು, ಮೋಡಕವಿದ ಹಾಗೂ ತಂಪಾದ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.






