ಕನ್ನಡಪರ ಹೋರಾಟಗಾರರ ಮೇಲಿನ ಮೊಕದ್ದಮೆ ಹಿಂಪಡೆಯುವ ನಿರ್ಧಾರ ಸ್ವಾಗತಾರ್ಹ: ಟಿ.ಎ.ನಾರಾಯಣಗೌಡ

ಬೆಂಗಳೂರು : ಕನ್ನಡಪರ, ರೈತಪರ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯುವ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಶೀಘ್ರದಲ್ಲೇ ಅದಕ್ಕೆ ಸಂಬಂಧಿಸಿದ ನಿರ್ಣಯವನ್ನು ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಲಿದ್ದೇವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಇದು ಅತ್ಯಂತ ಸ್ವಾಗತಾರ್ಹ ನಿರ್ಧಾರ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡಪರ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯುವುದಾಗಿ ಘೋಷಿಸಿದ್ದರು. ಈ ಸಂಬಂಧ ಕ್ಯಾಬಿನೆಟ್ ಉಪಸಮಿತಿ ರಚಿಸಿರುವುದಾಗಿಯೂ ಅವರು ಹೇಳಿದ್ದರು. ಅದರ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ ಎಂದು ಹೇಳಿದ್ದಾರೆ.
ನಾವು ಯಾರೂ ವೈಯಕ್ತಿಕ ಕ್ರಿಮಿನಲ್ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲು ಕೇಳುತ್ತಿಲ್ಲ. ಅಂತಹ ಪ್ರಕರಣಗಳು ನಮ್ಮ ಮೇಲೆ ಇಲ್ಲ. ಅನೇಕ ಚಳವಳಿಗಳ ಸಂದರ್ಭದಲ್ಲಿ ಹಾಕಲಾದ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲು ಕೋರುತ್ತಿದ್ದೇವೆ. ಎಂಬುದನ್ನು ಗೃಹಸಚಿವರಿಗೆ ಮನವರಿಕೆ ಮಾಡಿದ್ದೇನೆ. ಸರಕಾರ ಈಗಾಗಲೇ ಚಳವಳಿಯ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲು ತೀರ್ಮಾನಿಸಿದೆ ಎಂದು ಗೃಹ ಸಚಿವರು ಹೇಳಿರುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.







