ಕೊಪ್ಪಳ | ಟ್ರ್ಯಾಕ್ಟರ್ ಅಪಘಾತ : ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೊಪ್ಪಳದ ಹುಲಿಗೆಮ್ಮ ದೇವಾಲಯಕ್ಕೆ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ತುಂಗಭದ್ರಾ ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಚಿಕ್ಕ ಮಕ್ಕಳು ಸೇರಿದಂತೆ ಆರು ಮಂದಿ ಮೃತಪಟ್ಟ ಘಟನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
“ಘಟನೆಯಲ್ಲಿ ಮೃತಪಟ್ಟವರ ಆತ್ಮಕ್ಕೆ ಚಿರಶಾಂತಿ ಸಿಗಲಿ” ಎಂದು ಪ್ರಾರ್ಥಿಸಿರುವ ಸಿಎಂ, ಅಪಘಾತದ ಕುರಿತು ಸಂಸದ ತುಕಾರಾಂ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ.
ಮೃತರೆಲ್ಲರೂ ಬಡ ಕುಟುಂಬಗಳಿಗೆ ಸೇರಿದವರಾಗಿದ್ದು, ಈ ದುರಂತದಿಂದ ಕುಟುಂಬಗಳು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಹಿನ್ನೆಲೆ ಮಾನವೀಯ ನೆಲೆಯಲ್ಲಿ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಸಿದ್ದರಾಮಯ್ಯ ಹಾರೈಸಿದ್ದಾರೆ.
Next Story






