ಜಿ.ಪಂ., ತಾ.ಪಂ. ಚುನಾವಣೆ ಗಂಭೀರವಾಗಿ ಪರಿಗಣಿಸಲು ನಿರ್ಧಾರ: ವಿಜಯೇಂದ್ರ

ಬೆಂಗಳೂರು : ರಾಜ್ಯದಲ್ಲಿ ನಡೆಯಲಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲು ಬಿಜೆಪಿ ನಿರ್ಧರಿಸಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಶನಿವಾರ ನಗರದ ಹೊರ ವಲಯದಲ್ಲಿ ಖಾಸಗಿ ರೆಸಾರ್ಟ್‍ನಲ್ಲಿ ಪಕ್ಷದ ಪ್ರಮುಖರ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಲಿದೆ. ಕಾರ್ಯಕರ್ತರ ಚುನಾವಣೆ ಎಂದೇ ಪರಿಗಣಿಸುವ ಈ ಚುನಾವಣೆಯಲ್ಲಿ ಗೆಲ್ಲುವ ದೃಷ್ಟಿಯಿಂದ ಸಂಘಟನಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು. ಎಲ್ಲ ನಾಯಕರು ಜಿಲ್ಲೆ, ತಾಲೂಕುಗಳಿಗೆ ಪ್ರವಾಸ ಮಾಡಲಿದ್ದಾರೆ ಎಂದು ವಿವರಿಸಿದರು.
ಹಾಲು, ಮೊಸರು, ಸ್ಟಾಂಪ್ ಪೇಪರ್, ಬಸ್ ಪ್ರಯಾಣ ದರ, ಆಲ್ಕೋಹಾಲ್, ಡೀಸೆಲ್, ಪೆಟ್ರೋಲ್ ಸುಂಕ ಹೆಚ್ಚಳ ಸೇರಿದಂತೆ ಎಲ್ಲ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸುವ ಸ್ಥಿತಿ ಇದೆ. ಇನ್ನೊಂದೆಡೆ ಸರಕಾರ ಆಡಳಿತಾತ್ಮಕವಾಗಿ ನಿಷ್ಕ್ರಿಯ ಸ್ಥಿತಿಗೆ ತಲುಪಿದ್ದು, ಭ್ರಷ್ಟಾಚಾರ ಮಿತಿ ಮೀರಿದೆ. ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಿವೆ ಎಂದು ಅವರು ದೂರಿದರು.
ಬರಗಾಲದಿಂದ ರೈತರ ಸಂಕಷ್ಟ ತೀವ್ರವಾಗಿದೆ. ಜನ, ಜಾನುವಾರುಗಳು ಇದರಿಂದ ಕಷ್ಟ ಅನುಭವಿಸುವಂತಾಗಿದೆ ಎಂಬ ವಿಚಾರಗಳು ಸಭೆಯಲ್ಲಿ ಚರ್ಚೆಗೆ ಬಂದವು. ಈ ಸರಕಾರವು ಸುಳ್ಳು ಹೇಳುವ ಹಾಗೂ ತಪ್ಪು ಮಾಹಿತಿ ನೀಡುವ ವಿಚಾರಗಳೂ ಚರ್ಚೆಗೆ ನಡೆಸಿದ್ದು, ಈ ಸರಕಾರವು ರೈತರನ್ನು ಭಿಕ್ಷುಕರಂತೆ ಕಾಣುತ್ತಿದೆ. ಬರ ಪರಿಹಾರ ಮೊತ್ತವನ್ನು ಸರಿಯಾಗಿ ನೀಡಿಲ್ಲ ಎಂದು ಅವರು ಟೀಕಿಸಿದರು.
ಗೆಲುವು ಖಚಿತ: ರಾಜ್ಯ ಸರಕಾರದ ಆಡಳಿತ ವೈಫಲ್ಯ, ಬೆಲೆ ಏರಿಕೆ ನೀತಿಗಳನ್ನು ಜನರ ಮುಂದಿಡಲಾಗುವುದು. ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷವು ಗೆಲುವು ಸಾಧಿಸಲಿದೆ. ಹದಗೆಟ್ಟ ಕಾನೂನು ಸುವ್ಯವಸ್ಥೆ ಸೇರಿ ಇತರೆ ಎಲ್ಲ ವಿಚಾರಗಳ ಕುರಿತು ಜನಜಾಗೃತಿ ಮೂಡಿಸಲು ಎಲ್ಲ ಹೋರಾಟ ರೂಪಿಸುವ ಕುರಿತು ಚರ್ಚೆ ನಡೆಸಲಾಯಿತು ಎಂದರು.
ಪಕ್ಷದ ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ, ಸಹ ಉಸ್ತುವಾರಿ ಕಾಸಂ ವೆಂಕಟೇಶ್ವರಲು, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಪಕ್ಷದ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.






