ಹೈಕೋರ್ಟ್‌ನಿಂದ ಜಾಮೀನು ಮಂಜೂರು; ವಿನಯ್ ಕುಲಕರ್ಣಿ ಶಾಸಕ ಸ್ಥಾನಕ್ಕೆ ಮರುಜೀವ

ಬೆಂಗಳೂರು : ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವ ಕಾರಣ, ಧಾರವಾಡ ವಿಧಾನಸಭಾ ಕ್ಷೇತ್ರದ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನಕ್ಕೆ ಮರುಜೀವ ಬಂದಂತೆ ಆಗಿದೆ.
2016ರ ಜೂನ್ 15ರಂದು ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಿಮ್‍ನಲ್ಲಿ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 10 ಮಂದಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜೀವಾವಧಿ ಶಿಕ್ಷೆಗೆ ವಿಧಿಸಿತ್ತು.
ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರ ‘ಶಾಸಕ ಸ್ಥಾನ ರದ್ದಾಗಲಿದೆ, ಧಾರವಾಡ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುವ ಸಾಧ್ಯತೆಗಳಿವೆ’ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬಂದಿದ್ದವು. ಅಲ್ಲದೆ, ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಉಪ ಚುನಾವಣೆಗೆ ಅಭ್ಯರ್ಥಿಯ ಹುಡುಕಾಟವನ್ನೂ ನಡೆಸಲಾಗಿತ್ತು. ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಲಾಗುತ್ತದೆ ಎನ್ನಲಾಗಿತ್ತು.
ಆದರೆ, ಇದೀಗ ಜೀವಾವಧಿ ಶಿಕ್ಷೆ ಅಮಾನತ್ತಿನಲ್ಲಿಟ್ಟು ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದರಿಂದ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನಕ್ಕೆ ಮರುಜೀವ ಬಂದಂತೆ ಆಗಿದೆ. ಹೀಗಾಗಿ ವಿನಯ್ ಕುಲಕರ್ಣಿ ಅವರು ಶಾಸಕರಾಗಿ ಮುಂದುವರಿಯಲಿದ್ದು, ಆಗಸ್ಟ್ 13ರಿಂದ ನಡೆಯಲಿರುವ ವಿಧಾನಸಭೆ ಅಧಿವೇಶನ ಕಲಾಪದಲ್ಲಿಯೂ ಪಾಲ್ಗೊಳ್ಳಲಿದ್ದಾರೆಂದು ಹೇಳಲಾಗಿದೆ.






