ಮೈಸೂರು ವಿವಿ ಎಸ್ಸಿ, ಎಸ್ಟಿ ಸಂಶೋಧನಾರ್ಥಿಗಳ ಶಿಷ್ಯವೇತನ ಸಮಸ್ಯೆ ಬಗೆಹರಿಸಿ : ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಶೋಧನಾರ್ಥಿಗಳ ಶಿಷ್ಯವೇತನದ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಿ ಎಂದು ಅಧಿಕಾರಿಗಳಿಗೆ ನಗರಾಭಿವೃದ್ಧಿ ಇಲಾಖೆ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಮೈಸೂರು ವಿವಿಯ ಸಂಶೋಧನಾರ್ಥಿಗಳ ಶಿಷ್ಯವೇತನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ನಗರದ ಕಾವೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪಿಎಚ್‍ಡಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಒಟ್ಟು 116 ವಿದ್ಯಾರ್ಥಿಗಳಿಗೂ ಪ್ರವೇಶಾತಿ ನೀಡಬೇಕು ತಿಳಿಸಿದರು.
ಒಟ್ಟು ವಿದ್ಯಾರ್ಥಿಗಳಲ್ಲಿ 58 ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಹಾಗೂ ಉಳಿದ 58 ವಿದ್ಯಾರ್ಥಿಗಳಿಗೆ ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಸ್ಕಾಲರ್ಶಿಪ್ ಹಂಚಿಕೆ ಮಾಡಿ ನೀಡುವಂತೆ ಜಂಟಿ ತೀರ್ಮಾನಕ್ಕೆ ಬರಲು ಸೂಚಿಸಿದರು.
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಗೈಡ್‍ಗಳು (ಮಾರ್ಗದರ್ಶಕರು) ತಮ್ಮ ಸಾಮಥ್ರ್ಯ ಮೀರಿ ವಿದ್ಯಾರ್ಥಿಗಳನ್ನು ಸಂಶೋಧನೆಗೆ ತಗೆದುಕೊಂಡಿದ್ದಾರೆ. ಆ ಕಾರಣದಿಂದಾಗಿಯೇ ಪ್ರಸ್ತುತ ಈ ಸಮಸ್ಯೆ ಉದ್ಭವಿಸಿದೆ. ಮುಂದಿನ ವರ್ಷಗಳಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಸಹ ಪರಿಸ್ಥಿತಿಯನ್ನು ಅರ್ಥೈಸಿಕೊಂಡು ಸಹಕಾರ ನೀಡಬೇಕು ಎಂದು ತಿಳಿಸಿದರು.
ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಲೋಕನಾಥ್ ಮಾತನಾಡಿ, ಮಂಡ್ಯ ಮತ್ತು ಚಾಮರಾಜನಗರ ವಿಶ್ವವಿದ್ಯಾಲಯಗಳು ಪ್ರತ್ಯೇಕಗೊಂಡಿರುವುದರಿಂದ ಮೈಸೂರು ವಿಶ್ವವಿದ್ಯಾಲಯಕ್ಕೆ ಆರ್ಥಿಕ ಸಂಪನ್ಮೂಲಗಳ ಕೊರತೆ ಎದುರಾಗಿದೆ. ಈ ಕಾರಣದಿಂದಾಗಿ ಇಷ್ಟೊಂದು ದೊಡ್ಡ ಮಟ್ಟದ ಆರ್ಥಿಕ ಹೊರೆಯನ್ನು ಸಂಪೂರ್ಣವಾಗಿ ಭರಿಸಲು ಹಾಗೂ ಇಷ್ಟು ಸಂಖ್ಯೆಯ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲು ವಿಶ್ವವಿದ್ಯಾಲಯಕ್ಕೆ ಸಾಧ್ಯವಾಗುವುದಿಲ್ಲ ಅಸಹಾಯಕತೆ ವ್ಯಕ್ತಪಡಿಸಿದರು.
ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಸರಕಾರದ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಸಮಾಜ ಕಲ್ಯಾಣ ಇಲಾಖೆಯ ಸರಕಾರದ ಪ್ರದಾನ ಕಾರ್ಯದರ್ಶಿ ಮೋಹನ್ ರಾಜ್ ಮತ್ತಿತರರು ಉಪಸ್ಥಿತರಿದ್ದರು.






