ಬೆಂಗಳೂರು: ಫ್ರೀಡಂ ಪಾರ್ಕ್ ನಲ್ಲಿ ಯುವ ಮೋರ್ಚಾದಿಂದ ಪ್ರತಿಭಟನೆ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುದೊಡ್ಡ ಹಗರಣದ ಸಂಬಂಧ ನಾಗೇಂದ್ರರ ರಾಜೀನಾಮೆ ಪಡೆಯುವಂತೆ ಬಿಜೆಪಿ ಯುವ ಮೋರ್ಚಾ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಜಗದೀಶ್ ಆರ್. ಚಂದ್ರ ಅವರು ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರನ್ನು ಒತ್ತಾಯಿಸಿದ್ದಾರೆ.
ಬಿಜೆಪಿ ಬೆಂಗಳೂರು ಮಹಾನಗರ ಯುವ ಮೋರ್ಚಾ ವತಿಯಿಂದ ಇಂದು ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಗರಣ ಸಂಬಂಧ ಕೇಸ್ ಈಗಲೂ ನಡೆಯುತ್ತಿದೆ. ಹಿಂದೆ ನಾಗೇಂದ್ರ ರಾಜೀನಾಮೆ ನೀಡಿದ್ದರು. ಮತ್ತೊಮ್ಮೆ ಅವರಿಗೆ ಅವಕಾಶ ನೀಡಿದ್ದು ಸರಿಯಲ್ಲ ಎಂದರು.
ನಾಗೇಂದ್ರ ರಾಜೀನಾಮೆ ಕೊಡದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಧೀರಜ್ ಮುನಿರಾಜು ನೇತೃತ್ವದಲ್ಲಿ ಬೃಹತ್ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ಸರಕಾರ ರೈತರು, ವಿದ್ಯಾರ್ಥಿಗಳು, ಮಹಿಳಾ ಪರವಾಗಿ ಇಲ್ಲ ಎಂದು ಆರೋಪಿಸಿದ ಜಗದೀಶ್ ಆರ್. ಚಂದ್ರ, ಕಾಂಗ್ರೆಸ್ ಸರಕಾರವು ರಾಜ್ಯದಲ್ಲಿ ಒಬ್ಬ ಮಹಿಳೆಗೂ ಸಚಿವ ಸ್ಥಾನ ನೀಡಿಲ್ಲ ಎಂದು ಟೀಕಿಸಿದರು.
ಧಾರವಾಡದಲ್ಲಿ ವಿದ್ಯಾರ್ಥಿ ಪ್ರತಿಭಟನೆ ನಡೆದರೆ ಯಾರೂ ಅವರ ಬಳಿ ತೆರಳುವುದಿಲ್ಲ; ದಿಲ್ಲಿಗೆ ಮಾತ್ರ ಮುಖ್ಯಮಂತ್ರಿ ಓಡುತ್ತಾರೆ. ಇದು ಹೈಕಮಾಂಡ್ ಹೇಳಿದಂತೆ ಕೇಳುವ ಕಾಂಗ್ರೆಸ್ ಸರಕಾರ ಎಂದು ಟೀಕಿಸಿದರು.
ಯುವ ಮೋರ್ಚಾ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಯತಿನ್ ವೆಂಕಟೇಶ್, ಯುವ ಮೋರ್ಚಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.






