ಬೇಡಿಕೆ ಈಡೇರುವವರೆಗೂ ಗುರ್ಲಾಪುರದಲ್ಲಿ ಪ್ರತಿಭಟನೆ ಮುಂದುವರಿಕೆ: ಚೂನಪ್ಪ ಪೂಜೇರಿ

ಸಾಂದರ್ಭಿಕ ಚಿತ್ರ
ಬೆಳಗಾವಿ : ಕಬ್ಬಿನ ದರ ನಿಗದಿ ಹೋರಾಟ ಇನ್ನೂ ಮುಗಿದಿಲ್ಲ. ಸಕ್ಕರೆ ಕಾರ್ಖಾನೆಗಳ ಮಾಲಕರು ದರ ನಿಗದಿಗೆ 2 ದಿನಗಳ ಕಾಲಾವಕಾಶ ಕೇಳಿದ್ದಾರೆ. ರೈತರ ಬೇಡಿಕೆ ಈಡೇರುವವರೆಗೂ ಗುರ್ಲಾಪುರದಲ್ಲಿ ಪ್ರತಿಭಟನೆ ಮುಂದುವರಿಯಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಚೂನಪ್ಪಪೂಜೇರಿ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಕ್ಕರೆ ಕಾರ್ಖಾನೆಗಳ ಮಾಲಕರು ಪ್ರತಿ ಟನ್ ಕಬ್ಬಿಗೆ 3,500 ರೂ. ನೀಡಲು ಒಪ್ಪಿದ್ದಾರೆ. ಆದರೆ, ರೈತರು ಪ್ರತಿ ಕೆ.ಜಿ. ಸಕ್ಕರೆಗೆ 50 ರೂ.ಕನಿಷ್ಠ ಮಾರಾಟ ಬೆಲೆ ನಿಗದಿಪಡಿಸಿ, ಪ್ರತಿ ಟನ್ ಕಬ್ಬಿಗೆ 4,000 ರೂ. ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎಂದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸಕ್ಕರೆ ಕಾರ್ಖಾನೆಗಳ ಮಾಲಕರ ಸಭೆ ಕರೆದು, ಕೆಜಿ ಸಕ್ಕರೆಗೆ 50 ರೂಪಾಯಿ ಕನಿಷ್ಠ ಮಾರಾಟ ಬೆಲೆ ನಿಗದಿಪಡಿಸುವುದಾಗಿ ಭರವಸೆ ನೀಡಬೇಕು. ಈ ಮೂಲಕ ಕಬ್ಬು ಬೆಳೆಗಾರರ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು. ರಾಜ್ಯ ಸರಕಾರವು ಪ್ರತಿ ಟನ್ ಕಬ್ಬಿಗೆ 1,000 ರೂ. ಪ್ರೋತ್ಸಾಹಧನ ನೀಡುವವರೆಗೂ ಹೋರಾಟವನ್ನು ಹಿಂಪಡೆಯುವುದಿಲ್ಲ ಎಂದು ಚೂನಪ್ಪಪೂಜೇರಿ ಸರಕಾರಕ್ಕೆ ಎಚ್ಚರಿಕೆ ನೀಡಿದರು.




