ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪೂರ್ಣ: ಸಚಿವ ಮಧು ಬಂಗಾರಪ್ಪ

ಮಧು ಬಂಗಾರಪ್ಪ
ಬೆಳಗಾವಿ ಸುವರ್ಣ ವಿಧಾನ ಸೌಧ ಡಿ.10: ಮುಂಬರುವ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ ಪೂಂಜಾ ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ನೇಮಕಾತಿ ಹಾಗೂ ಪ್ರಸಕ್ತ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಕುರಿತು ಮಾಹಿತಿಯನ್ನು ಕೇಳಿದ ಪ್ರಶ್ನೆಗೆ ಉತ್ತರಿಸಿ ಸಚಿವರು ಮಾತನಾಡುತ್ತಿದ್ದರು.
ರಾಜ್ಯದಲ್ಲಿ 41,088 ಸರಕಾರಿ ಪ್ರಾಥಮಿಕ ಶಾಲೆಗಳಿದ್ದು, ಸರಕಾರಿ ಪ್ರಾಥಮಿಕ ಶಾಲೆಗಳಿಗೆ 1,78,935 ಹುದ್ದೆಗಳು ಮಂಜೂರಾಗಿದ್ದು ಈ ಪೈಕಿ 1,33,345 ಹುದ್ದೆಗಳು ಭರ್ತಿಯಾಗಿದ್ದು, 45,590 ಹುದ್ದೆಗಳು ಖಾಲಿ ಇವೆ. ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಸಚಿವರು ವಿವರಿಸಿದರು.
ರಾಜ್ಯದಲ್ಲಿ 5024 ಸರಕಾರಿ ಪ್ರೌಢ ಶಾಲೆಗಳಿದ್ದು, ಈ ಪ್ರೌಢಶಾಲೆಗಳಿಗೆ 44,144 ಹುದ್ದೆಗಳು ಮಂಜೂರಾಗಿರುತ್ತವೆ. ಈ ಪೈಕಿ 32,010 ಹುದ್ದೆಗಳು ಭರ್ತಿಯಾಗಿದ್ದು 12,134 ಹುದ್ದೆಗಳು ಖಾಲಿ ಇರುತ್ತವೆ. ಪ್ರಸಕ್ತ ಖಾಲಿ ಇರುವ ಹುದ್ದೆಗಳಗೆ ಎದುರಾಗಿ 2025-2026ನೇ ಶೈಕ್ಷಣಿಕ ಸಾಲಿಗೆ ಪ್ರಾಥಮಿಕ ಶಾಲೆಗಳಲ್ಲಿ 40,000 ಮತ್ತು ಪ್ರೌಢಶಾಲೆಗಳಲ್ಲಿ 11,000 ಒಟ್ಟಾರೆಯಾಗಿ 51,000 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡುವ ಮೂಲಕ ಶಿಕ್ಷಕರ ಕೊರತೆಯನ್ನು ಸರಿದೂರಿಸಲಾಗಿದೆ ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ. ಅಲ್ಲದೇ ವಿಕಲಚೇತನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ದೃಷ್ಟಿಯಿಂದ ವಿಶೇಷ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಸಚಿವರು ವಿವರಿಸಿದರು.
ಶಾಲಾ ಮಕ್ಕಳಿಗೆ ಬಿಸಿಯೂಟ ಯೋಜನೆಯಡಿ ಮೊಟ್ಟೆ ವಿತರಣೆ
ರಾಜ್ಯದ ಸರಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ಬೆಳಗ್ಗೆ ಬಿಸಿ ಹಾಲು, ಇದರೊಂದಿಗೆ ಮಿಕ್ಸ್ ರಾಗಿ ಮಾಲ್ಟ್, ಮಧ್ಯಾಹ್ನ ಬಿಸಿ ಊಟದೊಂದಿಗೆ ವಾರದಲ್ಲಿ ಆರು ದಿನ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದರು.
ವಿದ್ಯಾವಿಕಾಸ ಯೋಜನೆಯಡಿ 1 ರಿಂದ 10ನೇ ತರಗತಿಯ ಮಕ್ಕಳಿಗೆ ಎಲ್ಲಾ ಸರಕಾರಿ ಶಾಲಾ ಮಕ್ಕಳಿಗೆ ವಿದ್ಯಾ ವಿಕಾಸ ಯೋಜನೆಯಡಿಯಲ್ಲಿ ಸಮವಸ್ತ್ರ ಸರಬರಾಜು ಮಾಡಲು ಮೊದಲನೇ ಜೊತೆ ಸಮವಸ್ತ್ರಕ್ಕಾಗಿ ರೂ.83.07 ಕೋಟಿ ಬಿಡುಗಡೆ ಮಾಡಲಾಗಿದ್ದು, ಎರಡನೇ ಜೊತೆ ಸಮವಸ್ತ್ರಕ್ಕಾಗಿ ರೂ. 80.66 ಕೋಟಿ ಲಭ್ಯವಿರುತ್ತದೆ ಎಂದರು. ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಒಂದು ದಿನದ ಚರ್ಚೆಗೆ ಅವಕಾಶ ಮಾಡಿಕೊಡಬೇಕೆಂದು ಶಾಸಕ ಸುರೇಶ್ ಕುಮಾರ್ ಈಗಾಗಲೇ ಸಭಾಧ್ಯಕ್ಷರಿಗೆ ಪತ್ರ ನೀಡಿದ್ದು, ಶಿಕ್ಷಣ ವಿಷಯಕ್ಕೆ ಒಂದು ದಿನದ ಚರ್ಚೆಗೆ ಅವಕಾಶ ಮಾಡಿಕೊಡಬೇಕೆಂದು, ಚರ್ಚೆಯಲ್ಲಿ ಹಿರಿಯ ಶಾಸಕರ ಸಲಹೆ-ಸೂಚನೆಗಳನ್ನು ಪಡೆದು ಅದರಂತೆ ಕ್ರಮ ವಹಿಸಲಾಗುವುದು ಎಂದರು.







